ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ.
ಕಾಡಾನೆ ಸೆರೆ ಕಾರ್ಯಾಚರಣೆ ನಡೆಯುತ್ತಿರುವ ಬೆನ್ನಲ್ಲೇ ಶೆಟ್ಟಿಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಬರೋಬ್ಬರಿ 32 ಕಾಡಾನೆಗಳ ಹಿಂಡು ಪತ್ತೆಯಾಗಿದೆ. ಡ್ರೋನ್ ಮೂಲಕ ನಡೆಸಿದ ಪರಿಶೀಲನೆ ವೇಳೆ ಕಾಫಿ ತೋಟದಲ್ಲಿ ಗುಂಪಾಗಿ ನಿಂತಿದ್ದ ಆನೆಗಳು ಕಾಣಿಸಿಕೊಂಡಿವೆ.
ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಡ್ರೋನ್ ಕ್ಯಾಮೆರಾ ಮೂಲಕ ಆನೆಗಳ ಚಲನವಲನವನ್ನು ಗಮನಿಸಲಾಗಿದ್ದು, ಒಟ್ಟು 32 ಆನೆಗಳು ಇರುವುದನ್ನು ಗುರುತಿಸಲಾಗಿದೆ. ಇದೀಗ ಈ ಆನೆಗಳ ಹಿಂಡನ್ನು ಸುರಕ್ಷಿತವಾಗಿ ಮತ್ತೆ ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.
ಇನ್ನು ಸ್ಥಳದಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಎಪಿಸಿಸಿಎಫ್ ಮನೋಜ್ ರಾಜನ್ ಅವರು ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದ್ದಾರೆ. ಆನೆಗಳನ್ನು ಕಾಡಿನತ್ತ ಓಡಿಸುವ ಸಂದರ್ಭದಲ್ಲಿ ಸಾರ್ವಜನಿಕರಿಗೆ, ರೈತರಿಗೆ ಹಾಗೂ ಅರಣ್ಯ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.
ಕಾಫಿ ತೋಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡಾನೆಗಳು ಕಾಣಿಸಿಕೊಂಡಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ತೋಟದ ಕಾರ್ಮಿಕರಲ್ಲಿ ಆತಂಕ ಮೂಡಿದೆ. ಹೀಗಾಗಿ ಆನೆಗಳ ಚಲನವಲನದ ಮೇಲೆ ನಿರಂತರ ನಿಗಾ ಇಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ.
ಒಟ್ಟಿನಲ್ಲಿ, ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸಿದ್ದು, 32 ಆನೆಗಳ ಹಿಂಡನ್ನು ಯಾವುದೇ ಅಪಾಯವಿಲ್ಲದೆ ಕಾಡಿಗೆ ಮರಳಿಸುವುದು ಅಧಿಕಾರಿಗಳ ಮುಂದಿರುವ ಸವಾಲಾಗಿದೆ.