ಬೆಂಗಳೂರು: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋದ ನಾಲ್ಕನೇ ಮಾರ್ಗವಾದ ಪಿಂಕ್ ಲೈನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಿದ್ದಾರೆ. ಶುಕ್ರವಾರ ನಗರದ ಎಸ್‌ಜಿ ಪಾಳ್ಯ (ಸುದ್ದಗುಂಟೆ ಪಾಳ್ಯ) ಮೆಟ್ರೋ ನಿಲ್ದಾಣದಲ್ಲಿ ಹಸಿರು ಸಿಗ್ನಲ್ ನೀಡುವ ಮೂಲಕ ಮಾರ್ಗವನ್ನು ಉದ್ಘಾಟಿಸಿದ ಪ್ರಧಾನಿ, ಬಳಿಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಂಸದ ತೇಜಸ್ವಿ ಸೂರ್ಯ ಪ್ರಧಾನಿಯವರೊಂದಿಗೆ ಮೆಟ್ರೋದಲ್ಲಿ ಸಂಚರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಎಸ್‌ಜಿ ಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ರಸ್ತೆಯ ಎರಡೂ ಬದಿಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಅಭಿಮಾನಿಗಳು ಜಮಾಯಿಸಿದ್ದರು. ಪ್ರಧಾನಿಯನ್ನು ಸ್ವಾಗತಿಸಲು ಕಾದು ನಿಂತಿದ್ದ ಜನರತ್ತ ಮೋದಿ ನಗುಮುಖದಿಂದ ಕೈಬೀಸಿ ಅಭಿನಂದಿಸಿದರು. ಈ ವೇಳೆ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.
ಇನ್ನು ಪಿಂಕ್ ಲೈನ್ ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರು ನಿಲ್ದಾಣದಲ್ಲಿದ್ದ ಪಿಂಕ್ ಲೈನ್‌ನ ಮಾದರಿ ನಕ್ಷೆಯ ಮೂಲಕ ಪ್ರಧಾನಿಗೆ ಮಾರ್ಗದ ವಿವರಗಳನ್ನು ತಿಳಿಸಿದರು. ಮೆಟ್ರೋ ಸಂಪರ್ಕ ವ್ಯವಸ್ಥೆ ಹಾಗೂ ವಿವಿಧ ನಿಲ್ದಾಣಗಳ ಕುರಿತಾಗಿ ಮಾಹಿತಿ ನೀಡಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಮಾದರಿಯ ಅನುಷ್ಠಾನದಿಂದ ಆಗುವ ಪ್ರಯೋಜನಗಳು ಮತ್ತು ನಗರದ ಸಂಚಾರ ದಟ್ಟಣೆ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರಿಗೆ ವಿವರಿಸಿದರು. ಬಳಿಕ ಮೆಟ್ರೋ ಪ್ರಯಾಣದ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಹಾಗೂ ಪ್ರಧಾನಿಯವರ ನಡುವೆ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆದಿರುವುದು ಕಂಡುಬಂತು.
ನಂತರ ಐಐಎಂಬಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಉಡುಗೊರೆಯಾಗಿ ನೀಡಿದರು.