ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ ಏಳನೇ ದಿನವೂ ಭಕ್ತಸಾಗರವೇ ಹರಿದುಬಂದಿದೆ. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದು, ದೇವಸ್ಥಾನದ ಆವರಣದಲ್ಲಿ ಭಕ್ತರ ದಂಡೇ ಕಂಡುಬಂದಿದೆ. ಧರ್ಮ ದರ್ಶನದ ಜೊತೆಗೆ ₹1,000 ಮತ್ತು ₹300 ವಿಶೇಷ ದರ್ಶನದ ಸಾಲುಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ರಾತ್ರಿ ದೇವಿಗೆ ನೈವೇದ್ಯ ಹಾಗೂ ವಿಶೇಷ ಅಲಂಕಾರ ಕಾರ್ಯಗಳ ಹಿನ್ನೆಲೆಯಲ್ಲಿ ಗರ್ಭಗುಡಿಯ ಬಾಗಿಲು ಮುಚ್ಚಲಾಗಿತ್ತು. ಮಧ್ಯರಾತ್ರಿ 12.30ರಿಂದ ಬೆಳಗ್ಗೆ 6 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. ಹೀಗಾಗಿ ದೇವಿಯ ದರ್ಶನ ಪಡೆಯಲು ಭಕ್ತರು ರಾತ್ರಿಯಿಂದಲೇ ಸರತಿ ಸಾಲಿನಲ್ಲಿ ಕಾಯುತ್ತಿದ್ದರು.
ನೈವೇದ್ಯ ಹಾಗೂ ಅಲಂಕಾರ ಕಾರ್ಯಗಳು ಪೂರ್ಣಗೊಂಡ ಬಳಿಕ ಇಂದು ಬೆಳಗ್ಗೆ 6 ಗಂಟೆಯಿಂದ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿಯಿಂದಲೇ ಕಾಯುತ್ತಿದ್ದ ಭಕ್ತರು ಇದೀಗ ಹಂತ ಹಂತವಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಭಕ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಧರ್ಮ ದರ್ಶನದ ಸರತಿ ಸಾಲಿನಲ್ಲಿರುವವರಿಗೆ ದರ್ಶನ ಪಡೆಯಲು ಹೆಚ್ಚುವರಿ ಸಮಯ ನೀಡಲಾಗಿದೆ. ಇನ್ನು ವಿಶೇಷ ದರ್ಶನದ ಸಾಲುಗಳಲ್ಲಿಯೂ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ದರ್ಶನ ವ್ಯವಸ್ಥೆಯನ್ನು ನಿರ್ವಹಿಸುತ್ತಿದೆ.

ಇಂದು (ನವೆಂಬರ್ 5) ಮಧ್ಯಾಹ್ನ 2 ಗಂಟೆಯಿಂದ 3.30ರವರೆಗೆ ದೇವಿಗೆ ನೈವೇದ್ಯ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತಿದ್ದು, ಭಕ್ತರಿಗೆ ದರ್ಶನ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.