ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ಜೈಲಿನಲ್ಲಿರುವ ಚಳಿಯ ವಾತಾವರಣದಿಂದ ಬೆನ್ನು ನೋವು ಹೆಚ್ಚಾಗಿದ್ದು, ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ದರ್ಶನ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ದರ್ಶನ್, ತಮ್ಮ ಆರೋಗ್ಯ ಸಮಸ್ಯೆಯನ್ನು ನ್ಯಾಯಾಧೀಶರ ಮುಂದೆ ವಿವರಿಸಿದರು. ಜೈಲಿನಲ್ಲಿ ವಿಪರೀತ ಚಳಿ ಇರುವುದರಿಂದ ಬೆನ್ನು ನೋವು ಮತ್ತೆ ಉಲ್ಬಣಗೊಂಡಿದೆ. ನೋವು ತೀವ್ರವಾಗಿರುವ ಕಾರಣ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದೆ ಎಂದು ಮನವಿ ಮಾಡಿಕೊಂಡರು.
ದರ್ಶನ್ ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಜೈಲು ನಿಯಮಗಳ ಪ್ರಕಾರ ಸೂಕ್ತ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ನಿಯಮಾನುಸಾರ ಅರ್ಜಿ ಸಲ್ಲಿಸಿದ ಬಳಿಕ ಚಿಕಿತ್ಸೆಗೆ ಸಂಬಂಧಿಸಿದ ಮುಂದಿನ ಕ್ರಮ ಕೈಗೊಳ್ಳಲು ಅವಕಾಶವಿದೆ.
ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಬಳ್ಳಾರಿ ಜೈಲಿನಲ್ಲಿದ್ದ ಸಂದರ್ಭದಲ್ಲಿಯೂ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವುದಾಗಿ ತಿಳಿಸಿದ್ದರು. ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕೆಂಬ ಕಾರಣ ನೀಡಿ ಹೈಕೋರ್ಟ್ನಿಂದ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದಿದ್ದರು. ಆದರೆ ಆ ಅವಧಿಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿರಲಿಲ್ಲ.

ನಂತರದ ಕಾನೂನು ಪ್ರಕ್ರಿಯೆಗಳ ಬಳಿಕ ದರ್ಶನ್ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ಬೆನ್ನು ನೋವು ಮರುಕಳಿಸಿರುವುದಾಗಿ ತಿಳಿಸಿರುವ ಅವರು, ಫಿಸಿಯೋಥೆರಪಿ ಚಿಕಿತ್ಸೆಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ದರ್ಶನ್ ಅವರ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಯ ಅಗತ್ಯವನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಸದ್ಯ ನ್ಯಾಯಾಲಯವು ನಿಯಮಾನುಸಾರ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದು, ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆಗೆ ಅವಕಾಶ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.