ಬೆಂಗಳೂರು: ಲೇಖಕ ರವಿ ಹಂಜ್ ಅವರ ವಿವಾದಾತ್ಮಕ ‘ಬಸವ ಮಂಟಪ’ ಕೃತಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಲೇಖಕ ಹಾಗೂ ಪ್ರಕಾಶಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಸವ ಸಮಿತಿ ಅಧ್ಯಕ್ಷ ಅರವಿಂದ್ ಜತ್ತಿ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತಿಯಲ್ಲಿ ಬಸವಣ್ಣನವರನ್ನು ಕೊಲೆಗಾರ ಮತ್ತು ಕಳ್ಳ ಎಂಬಂತೆ ಬಿಂಬಿಸಲಾಗಿದೆ. ಅಲ್ಲದೆ, ಲಿಂಗಾಯತ ಪದವನ್ನು ತಿರುಚಿ ‘ಲಿಂಗಾಹತ’ ಎಂದು ಉಲ್ಲೇಖಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದರ ಜೊತೆಗೆ ಲಿಂಗಾಯತ ಸಮುದಾಯ ಹಾಗೂ ಕೆಲವು ಪೂಜ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಲಾಗಿದೆ ಎಂದು ಅರವಿಂದ್ ಜತ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರಿನ ಆಧಾರದ ಮೇಲೆ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕರ ವಿರುದ್ಧ ಸಾರ್ವಜನಿಕ ಶಾಂತಿ ಭಂಗ, ದ್ವೇಷಕ್ಕೆ ಪ್ರಚೋದನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪದಡಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 192, 196(1), 353(2) ಹಾಗೂ 299ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ಮೂಲಕ ‘ಬಸವ ಮಂಟಪ’ ಕೃತಿ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯಬೇಕಿದೆ.