ಅಕ್ಷರ ಗಾತ್ರ

ಮೋದಿ, ಅಮಿತ್ ಶಾ ವಿರುದ್ಧ ಫೋನ್ ಕದ್ದಾಲಿಕೆ ಆರೋಪ; ಸಿಎಂ, ನನ್ನ ಫೋನ್ ಕೂಡ ಟ್ಯಾಪ್ ಮಾಡಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ಬಿಳಿ ಕುರ್ತಾ ಧರಿಸಿ ಕೈ ಸನ್ನೆ ಮಾಡುತ್ತಾ ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ತಮ್ಮ ಫೋನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ಯಾಪ್ ಮಾಡಿಸುತ್ತಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಮಾಡಿರುವ ಫೋನ್ ಕದ್ದಾಲಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಈ ಹಿಂದೆ ಪೆಗಾಸಸ್ ಸ್ಪೈವೇರ್ ಮೂಲಕ ಫೋನ್ ಕದ್ದಾಲಿಕೆ ಮಾಡಿರುವ ಆರೋಪಗಳನ್ನೂ ಪ್ರಸ್ತಾಪಿಸಿದ್ದಾರೆ.

ಮೊದಲು ಕೇಂದ್ರ ಸಚಿವರ ಫೋನ್‌ಗಳನ್ನು ಕದ್ದಾಲಿಕೆ ಮಾಡಲಾಗಿತ್ತು. ಬಳಿಕ ವಿರೋಧ ಪಕ್ಷಗಳ ನಾಯಕರ ಮೇಲೆ ಕಣ್ಣಿಡಲು ಪ್ರಯತ್ನಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇಸ್ರೇಲ್‌ನಿಂದ ಪೆಗಾಸಸ್ ಸ್ಪೈವೇರ್ ಖರೀದಿಸಲಾಗಿತ್ತೇ ಎಂಬ ಪ್ರಶ್ನೆಯನ್ನೂ ಪ್ರಸ್ತಾಪಿಸಿದ ಅವರು, ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ದಾಖಲೆಗಳಿವೆ ಎಂದು ಹೇಳಿದ್ದಾರೆ.

ಗುಜರಾತ್‌ನಲ್ಲಿ ಇದೇ ಮಾದರಿಯನ್ನು ಅನುಸರಿಸಿ ವಿರೋಧ ಪಕ್ಷಗಳನ್ನು ನಿಯಂತ್ರಿಸುವ ಪ್ರಯತ್ನ ನಡೆದಿತ್ತು. ಇದೀಗ ಅದೇ ಮಾದರಿಯನ್ನು ದೇಶಾದ್ಯಂತ ಬಳಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬಿಜೆಪಿ ಸೇರಿದರೆ ಭ್ರಷ್ಟರೂ ಸಾಚಾ ಆಗುತ್ತಾರೆ!

ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್‌ನಲ್ಲಿದ್ದಾಗ ಭ್ರಷ್ಟರು ಎಂದು ಆರೋಪಿಸಲ್ಪಡುವವರು ಬಿಜೆಪಿಗೆ ಸೇರಿದ ಬಳಿಕ ಶುದ್ಧರಾಗುತ್ತಾರೆ ಎಂಬ ರೀತಿಯಲ್ಲಿ ಟೀಕಿಸಿದ್ದಾರೆ. ಇದಕ್ಕೆ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ಉದಾಹರಣೆಗಳಿವೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಅಸುರಕ್ಷತೆಯ ಭಾವನೆಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕಳೆದ ಹತ್ತು ವರ್ಷಗಳ ಸಾಧನೆಗಳ ಬಗ್ಗೆ ಜನರು ಪ್ರಶ್ನೆ ಕೇಳುತ್ತಿದ್ದಾರೆ ಎಂದಿದ್ದಾರೆ.

ವಿರೋಧ ಪಕ್ಷಗಳನ್ನು ಬೆದರಿಸುವ ಪ್ರಯತ್ನ: ಆರೋಪ

ಮತಗಳ್ಳತನದ ಆರೋಪ, ಚುನಾವಣಾ ಆಯೋಗದ ವಿಚಾರ, ನಿರುದ್ಯೋಗ, ಚೀನಾ ಮತ್ತು ಪಾಕಿಸ್ತಾನದೊಂದಿಗಿನ ವಿದೇಶಾಂಗ ನೀತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಜನರು ಪ್ರಶ್ನಿಸುತ್ತಿದ್ದಾರೆ. ಇಂತಹ ಪ್ರಶ್ನೆಗಳಿಂದ ಗಮನ ಬೇರೆಡೆ ಸೆಳೆಯಲು ಹಾಗೂ ವಿರೋಧ ಪಕ್ಷಗಳನ್ನು ಹೆದರಿಸಿ, ಬೆದರಿಸಿ ಹತೋಟಿಯಲ್ಲಿಡುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.