ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದಲ್ಲಿ ಐಇಡಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಇದೀಗ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಂದು ಸ್ಫೋಟಕ ವಸ್ತು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಜ್ಞಾನಭಾರತಿಯ ಸೊಣ್ಣೇನಹಳ್ಳಿ ಸರ್ಕಲ್ ಸಮೀಪ ಬಂಡೆ ಒಡೆಯಲು ಬಳಸುವ ಡೈನಮೈಟ್ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಣ್ಣೇನಹಳ್ಳಿ ಸರ್ಕಲ್ ಸಮೀಪದ ಪ್ರದೇಶದಲ್ಲಿ ಸ್ಫೋಟಕ ವಸ್ತು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಕಲ್ಲು ಕ್ವಾರಿಗಳಲ್ಲಿ ಬಂಡೆ ಒಡೆಯಲು ಬಳಸುವ ಡೈನಮೈಟ್ ಎಂದು ತಿಳಿದುಬಂದಿದೆ. ಸಾರ್ವಜನಿಕ ಪ್ರದೇಶದ ಸಮೀಪ ಸ್ಫೋಟಕ ವಸ್ತು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದೇ ವೇಳೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿದ್ದು, ಪತ್ತೆಯಾದ ಸ್ಫೋಟಕ ವಸ್ತುವನ್ನು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಲು ಅಗತ್ಯ ಸಿದ್ಧತೆ ನಡೆಸಿದ್ದಾರೆ. ಸ್ಫೋಟಕದ ಸ್ವರೂಪ ಹಾಗೂ ಅದರ ಅಪಾಯದ ಮಟ್ಟವನ್ನು ಪರಿಶೀಲಿಸಲಾಗುತ್ತಿದೆ.

ಇನ್ನು ಕಲ್ಲು ಕ್ವಾರಿಗಳಲ್ಲಿ ಬಳಸುವ ಸ್ಫೋಟಕ ವಸ್ತು ಜನವಸತಿ ಪ್ರದೇಶದ ಸಮೀಪ ಹೇಗೆ ಬಂತು ಎಂಬ ಪ್ರಶ್ನೆ ಉದ್ಭವಿಸಿದೆ. ಈ ಡೈನಮೈಟ್ ಅನ್ನು ಸ್ಥಳಕ್ಕೆ ತಂದವರು ಯಾರು? ಯಾವ ಉದ್ದೇಶಕ್ಕಾಗಿ ಇಲ್ಲಿ ಇರಿಸಲಾಗಿತ್ತು? ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪುಲಿಕೇಶಿನಗರದಲ್ಲಿ ಐಇಡಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಜ್ಞಾನಭಾರತಿ ವ್ಯಾಪ್ತಿಯಲ್ಲಿ ಸ್ಫೋಟಕ ವಸ್ತು ಪತ್ತೆಯಾಗಿರುವುದು ಗಮನ ಸೆಳೆದಿದೆ. ಆದರೆ ಈ ಎರಡು ಘಟನೆಗಳ ನಡುವೆ ಯಾವುದೇ ಸಂಬಂಧವಿದೆಯೇ ಎಂಬುದು ದೃಢಪಟ್ಟಿಲ್ಲ.
ಸದ್ಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ಮುಂದುವರಿಸಿದ್ದು, ಸ್ಫೋಟಕ ವಸ್ತುವನ್ನು ತಂದಿಟ್ಟವರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ಲಭ್ಯವಾಗಬೇಕಿದೆ.