ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೆ ಕೊಂಚ ಬದಲಾವಣೆಯಾಗುವ ಸಾಧ್ಯತೆಯಿದೆ. ನವೆಂಬರ್ 8 ಮತ್ತು 9ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆದರೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ನವೆಂಬರ್ 8ರಂದು ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡೂ ದಿನ ಮುಖ್ಯವಾಗಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 8 ಮತ್ತು 9ರಂದು ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 8ರಂದು ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇನ್ನೊಂದೆಡೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಒಣಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.