ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಗೆ ಭಾರೀ ವಾಹನಗಳೇ ಕಾರಣ? GBA ಮುಖ್ಯ ಆಯುಕ್ತರಿಂದ ಮಹತ್ವದ ಮಾಹಿತಿ

ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಗೆ ಭಾರೀ ವಾಹನಗಳೇ ಕಾರಣ? GBA ಮುಖ್ಯ ಆಯುಕ್ತರಿಂದ ಮಹತ್ವದ ಮಾಹಿತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅವುಗಳನ್ನು ಮುಚ್ಚಲು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡುತ್ತಿದ್ದಾರೆ. ಈ ನಡುವೆ ನಗರದಲ್ಲಿ ರಸ್ತೆಗುಂಡಿಗಳು ಉಂಟಾಗಲು ಪ್ರಮುಖ ಕಾರಣವೇನು ಎಂಬುದನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಕಾಂಕ್ರೀಟ್ ಮತ್ತು ಜಲ್ಲಿ ಸಾಗಿಸುವ ಭಾರೀ ಟ್ರಕ್‌ಗಳು ಹಾಗೂ ಲಾರಿಗಳ ಸಂಚಾರದಿಂದ ರಸ್ತೆಗಳಿಗೆ ಹಾನಿಯಾಗುತ್ತಿದ್ದು, ಇದರಿಂದ ರಸ್ತೆಗುಂಡಿಗಳು ನಿರ್ಮಾಣವಾಗುತ್ತಿವೆ ಎಂದು ಜಿಬಿಎ ಮುಖ್ಯ ಆಯುಕ್ತರು ಮಾಹಿತಿ ನೀಡಿದ್ದಾರೆ. ಭಾರೀ ವಾಹನಗಳ ನಿರಂತರ ಸಂಚಾರ ರಸ್ತೆಗಳ ಸ್ಥಿತಿಗತಿ ಹದಗೆಡಲು ಪ್ರಮುಖ ಕಾರಣವಾಗುತ್ತಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇನ್ನು, ನಗರದ ರಸ್ತೆಗುಂಡಿಗಳ ಸಮಸ್ಯೆ ಪರಿಹಾರ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು 4,200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ಬಾಕಿ ಇರುವ ಹೊಸ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಗುರಿ ಹೊಂದಲಾಗಿದೆ.

ನಗರದಲ್ಲಿ ಸುಮಾರು 2,300 ಕಿಲೋಮೀಟರ್ ರಸ್ತೆ ಕಾಮಗಾರಿಗಳು ಬಾಕಿ ಉಳಿದಿವೆ. ಮತ್ತೊಂದೆಡೆ, ವಾರ್ಡ್‌ಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು 75 ಲಕ್ಷ ರೂ. ಮೀಸಲಿಡಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಗುಂಡಿಗಳನ್ನು ಮುಚ್ಚುವ ಗುರಿಯನ್ನು ಜಿಬಿಎ ಅಧಿಕಾರಿಗಳು ಹೊಂದಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರ ಗಡುವಿನ ಹಿನ್ನೆಲೆಯಲ್ಲಿ ರಸ್ತೆಗುಂಡಿ ಮುಚ್ಚುವ ಕಾರ್ಯಕ್ಕೆ ಅಧಿಕಾರಿಗಳು ವೇಗ ನೀಡಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳುತ್ತವೆಯೇ ಎಂಬುದನ್ನು ಕಾದುನೋಡಬೇಕಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.