ಚಿಕ್ಕಮಗಳೂರು: ವಲಸೆ ಕಾರ್ಮಿಕರು ಹಾಗೂ ಮಹಿಳೆಯರ ಮೇಲೆ ಬಂದೂಕು ತೋರಿಸಿ ಹಲ್ಲೆ ನಡೆಸಿರುವ ಆರೋಪ ಕಾಫಿ ಎಸ್ಟೇಟ್ ಮಾಲೀಕರ ವಿರುದ್ಧ ಕೇಳಿಬಂದಿದೆ.
ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಕಾಫಿ ಎಸ್ಟೇಟ್‌ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.
ಎಸ್ಟೇಟ್ ಮಾಲೀಕರಾದ ಭರತ್ ಮತ್ತು ಸತ್ಯಕೀರ್ತಿ ಎಂಬುವವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಂದೂಕು ಹಿಡಿದು ಬೆದರಿಸುವುದರ ಜೊತೆಗೆ ದೊಣ್ಣೆಯಿಂದ ಮಹಿಳೆಯರು ಮತ್ತು ಪುರುಷರ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಹೊರ ಜಿಲ್ಲೆಗಳಿಂದ ಬಂದ ಕಾರ್ಮಿಕರಿಗೆ ಸರಿಯಾಗಿ ವೇತನ ನೀಡದೆ ದುಡಿಸಿಕೊಳ್ಳಲಾಗುತ್ತಿದೆ. ಅಲ್ಲದೆ, ಅವರನ್ನು ಜೀತದಾಳುಗಳಂತೆ ಇರಿಸಿ ಮಾನಸಿಕ, ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.

ಹಲ್ಲೆಗೊಳಗಾದ ಕಾರ್ಮಿಕರು ಚಿಕ್ಕಮಗಳೂರಿನ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.