ರಿಯಾದ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಬೆನ್ನಲ್ಲೇ ಸೌದಿ ಅರೇಬಿಯಾದ ಮತ್ತೊಂದು ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿದೆ. ದಮ್ಮಾಮ್ ನಗರದಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಬುಧವಾರ (ಅಕ್ಟೋಬರ್ 21) ಸಂಜೆ ನಡೆದ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.
ಸೌದಿ ಅರೇಬಿಯಾದ ಜನರಲ್ ಅಥಾರಿಟಿ ಆಫ್ ಸಿವಿಲ್ ಏವಿಯೇಷನ್ (GACA) ಆರಂಭಿಕ ಹೇಳಿಕೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿತ್ತು. ಆದರೆ ನಂತರದ ವರದಿಯ ಪ್ರಕಾರ, ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದ್ದು, ಮೃತರಲ್ಲಿ ಓರ್ವ ಭಾರತೀಯ ಪ್ರಜೆ ಹಾಗೂ ಮತ್ತೋರ್ವ ಸೌದಿ ಪ್ರಜೆ ಸೇರಿದ್ದಾರೆ.
ದಾಳಿಯಲ್ಲಿ ಗಾಯಗೊಂಡ ಎಂಟು ಮಂದಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯಿಂದ ವಿಮಾನ ನಿಲ್ದಾಣದ ಆಸ್ತಿಪಾಸ್ತಿಗೂ ಹಾನಿಯಾಗಿದೆ. ಹಾನಿಯ ಪ್ರಮಾಣವನ್ನು ನಿರ್ಧರಿಸಲು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದಾಳಿಯ ಪರಿಣಾಮ ದಮ್ಮಾಮ್ ವಿಮಾನ ನಿಲ್ದಾಣದ ವಿಮಾನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಕೆಲವು ವಿಮಾನಗಳನ್ನು ಪರ್ಯಾಯ ವಿಮಾನ ನಿಲ್ದಾಣಗಳತ್ತ ತಿರುಗಿಸಲಾಗಿದೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು, ತೈಲ ಉತ್ಪಾದನಾ ಕೇಂದ್ರಗಳು ಹಾಗೂ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಈ ಹಿಂದೆ ಹಲವು ದಾಳಿಗಳ ಹೊಣೆ ಹೊತ್ತುಕೊಂಡಿದ್ದಾರೆ. ಆದರೆ ದಮ್ಮಾಮ್ ವಿಮಾನ ನಿಲ್ದಾಣದ ಮೇಲಿನ ಈ ನಿರ್ದಿಷ್ಟ ದಾಳಿಯನ್ನು ಯಾರು ನಡೆಸಿದ್ದಾರೆ ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ.
ಇದೇ ವೇಳೆ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ಬಂದ ನಾಲ್ಕು ಡ್ರೋನ್‌ಗಳನ್ನು ವಾಯು ರಕ್ಷಣಾ ವ್ಯವಸ್ಥೆಗಳು ಯಶಸ್ವಿಯಾಗಿ ತಡೆದು ನಾಶಪಡಿಸಿವೆ ಎಂದು ಸೌದಿ ನೇತೃತ್ವದ ಮೈತ್ರಿಕೂಟದ ವಕ್ತಾರ ಬ್ರಿಗೇಡಿಯರ್ ಜನರಲ್ ತುರ್ಕಿ ಅಲ್-ಮಲ್ಕಿ ತಿಳಿಸಿದ್ದಾರೆ.
ಮತ್ತೊಂದೆಡೆ ಯೆಮೆನ್‌ನ ಅಲ್-ರಯಾನ್ ವಿಮಾನ ನಿಲ್ದಾಣದ ಮೇಲೂ ಪದೇಪದೇ ದಾಳಿಗಳು ನಡೆಯುತ್ತಿರುವುದಾಗಿ ವರದಿಯಾಗಿದೆ. ನಾಗರಿಕ ವಿಮಾನಯಾನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುವ ದಾಳಿಗಳಿಂದ ಸಾಮಾನ್ಯ ಜನರ ಸಂಚಾರ ಸ್ವಾತಂತ್ರ್ಯ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಯೆಮೆನ್ ಸೇನೆಯ ವಕ್ತಾರ ಕರ್ನಲ್ ಮಜಿದ್ ಅಲ್-ನಜಿಲಿ ಖಂಡಿಸಿದ್ದಾರೆ.
ಸೌದಿ ಅರೇಬಿಯಾದಲ್ಲಿ ಹೆಚ್ಚುತ್ತಿರುವ ಭದ್ರತಾ ಆತಂಕದ ಹಿನ್ನೆಲೆಯಲ್ಲಿ ಅಮೆರಿಕದ ವಿದೇಶಾಂಗ ಇಲಾಖೆಯೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ತುರ್ತು ಅಗತ್ಯವಿಲ್ಲದ ರಾಜತಾಂತ್ರಿಕ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಸೌದಿ ಅರೇಬಿಯಾದಿಂದ ನಿರ್ಗಮಿಸುವಂತೆ ಸೂಚಿಸಲಾಗಿದೆ.
ಸೌದಿ ಅರೇಬಿಯಾದ ನಾಗರಿಕ ವಿಮಾನ ನಿಲ್ದಾಣಗಳು ಮತ್ತು ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ನಡೆಯುತ್ತಿರುವ ದಾಳಿಗಳು ಸಾರ್ವಜನಿಕರ ಸುರಕ್ಷತೆಗೆ ಗಂಭೀರ ಸವಾಲಾಗಿವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಕಳವಳ ವ್ಯಕ್ತಪಡಿಸಿದೆ.