ಬಾಗಲಕೋಟೆ: ಕಬ್ಬಿಗೆ ಯೋಗ್ಯ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ರೈತರ ಹೋರಾಟ ಅಂತ್ಯಗೊಂಡ ಬೆನ್ನಲ್ಲೇ ಇದೀಗ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ.
ಟನ್ ಕಬ್ಬಿಗೆ ₹4,200 ಬೆಲೆ ನೀಡಬೇಕೆಂದು ಒತ್ತಾಯಿಸಿ ಸಾವಿರಾರು ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಕಬ್ಬು ಬೆಳೆಗಾರರು, ಟ್ರ್ಯಾಕ್ಟರ್ ರ‍್ಯಾಲಿ ಹಾಗೂ ಪಾದಯಾತ್ರೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ವೇಳೆ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸ್ಥಳದಲ್ಲೇ ಅಡುಗೆ ಮಾಡಿ ಊಟ ಮಾಡಿದ ರೈತರು, ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಡಿಸಿ ಸ್ಥಳಕ್ಕೆ ಬಂದು ಮನವಿ ಆಲಿಸಲಿ:
ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿದ ರೈತರು, ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ತಮ್ಮ ಅಹವಾಲು ಆಲಿಸಬೇಕು. ಇಲ್ಲದಿದ್ದರೆ ಗುರುವಾರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ, ಟನ್ ಕಬ್ಬಿಗೆ ₹3,600 ಬೆಲೆ ನಿಗದಿಪಡಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಬೆಳಗಾವಿ ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳು ಟನ್ ಕಬ್ಬಿಗೆ ₹4,200 ಬೆಲೆ ಘೋಷಿಸಿವೆ. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಅದೇ ಬೆಲೆ ಘೋಷಣೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಮುಧೋಳದಲ್ಲಿ ಪೊಲೀಸ್ ಬಿಗಿ ಭದ್ರತೆ:
ರೈತರ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಧೋಳ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕೆಲವೇ ಮೀಟರ್ ದೂರದಲ್ಲಿರುವ ನಿರಾಣಿ ಶುಗರ್ಸ್ ಸಕ್ಕರೆ ಕಾರ್ಖಾನೆಗೂ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನೆ ವೇಳೆ ರೈತರು ಕಾರ್ಖಾನೆಗಳಿಗೆ ನುಗ್ಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.
ರೈತರು ಹಸಿರು ಟವೆಲ್‌ಗಳನ್ನು ತಿರುಗಿಸುತ್ತಾ ರ‍್ಯಾಲಿ ಮತ್ತು ಪಾದಯಾತ್ರೆಯಲ್ಲಿ ಪಾಲ್ಗೊಂಡು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ರೈತರ ಹೋರಾಟದ ಬಗ್ಗೆ ಮುರುಗೇಶ್ ನಿರಾಣಿ ಹೇಳಿದ್ದೇನು?
ಇನ್ನು ರೈತರ ಪ್ರತಿಭಟನೆ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ಟನ್ ಕಬ್ಬಿಗೆ ₹3,600 ಬೆಲೆ ಘೋಷಿಸಲಾಗಿದ್ದು, ಮೊದಲ ಕಂತಿನ ಈ ಬೆಲೆಗೆ ಬಹುತೇಕ ರೈತರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮುಧೋಳ ಭಾಗದ ಮೂರು ಸಕ್ಕರೆ ಕಾರ್ಖಾನೆಗಳನ್ನು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲ ಕಾರ್ಖಾನೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಕಾರ್ಖಾನೆಗಳು ಆರಂಭವಾಗಲು ಮತ್ತು ರೈತರು ಕಬ್ಬು ಸಾಗಿಸಲು ಅಡ್ಡಿಪಡಿಸಬಾರದು. ವಿಳಂಬವಾದಷ್ಟು ಹೊಲದಲ್ಲೇ ಕಬ್ಬು ಹಾಳಾಗುತ್ತದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದ್ದಾರೆ.
ಒಟ್ಟಿನಲ್ಲಿ ಕಬ್ಬಿಗೆ ಯೋಗ್ಯ ಬೆಲೆ ನಿಗದಿಪಡಿಸುವಂತೆ ಮುಧೋಳದಲ್ಲಿ ರೈತರ ಹೋರಾಟ ಮುಂದುವರಿದಿದೆ. ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಮುನ್ನ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ರೈತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ.