ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಪತ್ನಿ ಸೇರಿದಂತೆ ಏಳು ಮಂದಿಯನ್ನು ಹತ್ಯೆ ಮಾಡಿದ ಆರೋಪದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ರಂಗಪ್ಪ ಸರ್ಕಲ್ ರಸ್ತೆಯ ಎಡಭಾಗದಲ್ಲಿರುವ ಕಾಡಿನ ಪ್ರದೇಶದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅಂಬುಲೆನ್ಸ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಆರೋಪಿಯನ್ನು ಸ್ಥಳಕ್ಕೆ ಕರೆದೊಯ್ದು ಮಹಜರು
ಏಳು ಮಂದಿಯ ಹತ್ಯೆ ಪ್ರಕರಣದ ಆರೋಪಿ ಇಂದುಶೇಖರ್‌ನನ್ನು ಪೊಲೀಸರು ನಂದಿಬೆಟ್ಟಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಈ ವೇಳೆ ಆತ ನೀಡಿದ ಮಾಹಿತಿಯ ಆಧಾರದ ಮೇಲೆ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

ಉಳಿದ ಆರು ಮೃತದೇಹಗಳಿಗಾಗಿ ಶೋಧ
ಇನ್ನೂ ಆರು ಮೃತದೇಹಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನಂದಿಬೆಟ್ಟದ ಸ್ಕಂದಗಿರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಇದಲ್ಲದೆ, ಆರೋಪಿ ನೀಡಿರುವ ಮಾಹಿತಿಯ ಆಧಾರದ ಮೇಲೆ ತಮಿಳುನಾಡಿನ ಸೇಲಂ ಪ್ರದೇಶಕ್ಕೂ ವಿಶೇಷ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಉಳಿದ ಮೃತದೇಹಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.