ಕೊಪ್ಪಳ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಮತ್ತೆ ತೀವ್ರಗೊಳ್ಳುವ ಲಕ್ಷಣ ಕಾಣುತ್ತಿದೆ.
ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ 11ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರುವ ಉದ್ದೇಶದಿಂದ ಡಿಸೆಂಬರ್ 10ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಬಸವಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
2024ರಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ನಡೆದಿದ್ದ ಪೊಲೀಸ್ ಲಾಠಿಚಾರ್ಜ್ ಘಟನೆಯನ್ನು ಮತ್ತೆ ಮುನ್ನೆಲೆಗೆ ತಂದಿರುವ ಶ್ರೀಗಳು, ಡಿಸೆಂಬರ್ 10ನ್ನು ‘ಲಿಂಗಾಯತರ ಮೇಲಿನ ದೌರ್ಜನ್ಯ ದಿನ’ವಾಗಿ ಆಚರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಮೀಸಲಾತಿ ದೊರೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದ್ದಾರೆ.
2ಎ ಮೀಸಲಾತಿಗಾಗಿ ಮತ್ತೆ ಬೀದಿಗಿಳಿಯಲಿರುವ ಪಂಚಮಸಾಲಿ ಸಮುದಾಯ:
ಪಂಚಮಸಾಲಿ ಸಮುದಾಯಕ್ಕೆ ಪ್ರಸ್ತುತ 3ಬಿ ಪ್ರವರ್ಗದಡಿ ಶೇ.5ರಷ್ಟು ಮೀಸಲಾತಿ ಸಿಗುತ್ತಿದೆ. ಆದರೆ ಸಮುದಾಯವನ್ನು ಶೇ.15ರಷ್ಟು ಮೀಸಲಾತಿ ಹೊಂದಿರುವ 2ಎ ಪ್ರವರ್ಗಕ್ಕೆ ಸೇರಿಸಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ.
ಇದರ ಜೊತೆಗೆ ಎಲ್ಲ ಲಿಂಗಾಯತ ಸಮುದಾಯಗಳಿಗೂ ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನೂ ಸ್ವಾಮೀಜಿ ಮುಂದಿಟ್ಟಿದ್ದಾರೆ. ಈ ಬೇಡಿಕೆಗಳ ಈಡೇರಿಕೆಗಾಗಿ ಡಿ.10ರಂದು ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
31 ಜಿಲ್ಲೆಗಳಿಂದ ಜನರ ಆಗಮನ?
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಜನರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೋರಾಟಕ್ಕೆ ಎಲ್ಲಾ ಲಿಂಗಾಯತ ಪೀಠಗಳ ಸ್ವಾಮೀಜಿಗಳಿಗೂ ಆಹ್ವಾನ ನೀಡಲಾಗಿದೆ ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಇನ್ನು ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಸಮಾಜದ ಶಾಸಕರು ಈ ವಿಚಾರವನ್ನು ಪ್ರಸ್ತಾಪಿಸಬೇಕು. ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ಶಾಸಕರು ಪಕ್ಷದ ಭೇದ ಮರೆತು ಪಂಚಮಸಾಲಿ ಸಮಾಜದ ಬೇಡಿಕೆಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.
ಲಾಠಿಚಾರ್ಜ್ ಘಟನೆಯ ನೆನಪಿನಲ್ಲಿ ಹೋರಾಟ:
2024ರ ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರು ಪೊಲೀಸರ ಬ್ಯಾರಿಕೇಡ್‌ಗಳನ್ನು ಮುರಿದು ಸುವರ್ಣ ವಿಧಾನಸೌಧದತ್ತ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು.
ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಎಡಿಜಿಪಿ ಆರ್. ಹಿತೇಂದ್ರ ಅವರ ಆದೇಶದ ಮೇರೆಗೆ ಪೊಲೀಸರು ಲಾಠಿಪ್ರಹಾರ ನಡೆಸಿದ್ದರು. ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.
ಈ ಲಾಠಿಚಾರ್ಜ್ ಘಟನೆಯ ಎರಡನೇ ವರ್ಷದ ಸಂದರ್ಭದಲ್ಲಿ ಮತ್ತೊಮ್ಮೆ ಅದೇ ದಿನಾಂಕದಂದು ಬೆಳಗಾವಿಯಲ್ಲಿ ಹೋರಾಟ ನಡೆಸಲು ಸಮುದಾಯ ನಿರ್ಧರಿಸಿದೆ. ಹೀಗಾಗಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.