ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಂಸತ್ ಮಾರ್ಗದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸ್ ಹಾಗೂ ಭದ್ರತಾ ಪಡೆಗಳು ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸಿವೆ.
ಬೆಳಗ್ಗೆ 11:35ರ ಸುಮಾರಿಗೆ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ಲಭಿಸಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬ್ಯಾಂಕ್ ಆವರಣದಲ್ಲಿ ಪರಿಶೀಲನೆ ಆರಂಭಿಸಿದ್ದಾರೆ.
ಬ್ಯಾಂಕ್ ಕಟ್ಟಡದ ಒಳಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಮಾನಾಸ್ಪದ ವಸ್ತುಗಳು ಮತ್ತು ಸ್ಫೋಟಕಗಳಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಆದರೆ, ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
ಇನ್ನು ಬೆದರಿಕೆ ಕರೆ ಮಾಡಿದವರು ಯಾರು? ಯಾವ ಉದ್ದೇಶದಿಂದ ಕರೆ ಮಾಡಿದ್ದಾರೆ? ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಬ್ಯಾಂಕ್ ಆವರಣದಲ್ಲಿ ಭದ್ರತಾ ತಪಾಸಣೆ ಮುಂದುವರಿದಿದೆ.
