ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಆಟೋ ಚಾಲಕನ ಮೊಬೈಲ್ ಮೂಲಕ ಪೊಲೀಸರಿಗೆ ಬಾಂಬ್ ಬೆದರಿಕೆ ಹಾಕಿದ್ದ ಕಾರ್ತಿಕ್ ಎಂಬಾತನನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾರ್ತಿಕ್ ಎಂಬಾತ ನಮ್ಮ ಯಾತ್ರಿ ಆ್ಯಪ್‌ನಲ್ಲಿ ಆಟೋ ಬುಕ್ ಮಾಡಿದ್ದ. ಬಳಿಕ ಆಟೋ ಚಾಲಕ ಭಗವಂತರಾಯ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮುಂದಿನ ಬ್ಯಾರಿಕೇಡ್ ಬಳಿ ಬರುವಂತೆ ಸೂಚಿಸಿದ್ದ. ಅದರಂತೆ ಚಾಲಕ ನಿಗದಿತ ಸ್ಥಳಕ್ಕೆ ಬಂದ ಬಳಿಕ ಕಾರ್ತಿಕ್‌ಗೆ ಕರೆ ಮಾಡಿ ತಾನು ಸ್ಥಳಕ್ಕೆ ಬಂದಿರುವುದಾಗಿ ತಿಳಿಸಿದ್ದಾನೆ.
ಈ ವೇಳೆ ಅಲ್ಲಿದ್ದ ಪೊಲೀಸರಿಗೆ ಮೊಬೈಲ್ ನೀಡುವಂತೆ ಕಾರ್ತಿಕ್ ಸೂಚಿಸಿದ್ದಾನೆ. ಆಟೋ ಚಾಲಕ ಪೊಲೀಸರಿಗೆ ಫೋನ್ ನೀಡಿದಾಗ, ಸಿಎಂ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ, ಮುಖ್ಯಮಂತ್ರಿ ಅವರ ಬೆಂಗಾವಲು ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾನೆ ಎನ್ನಲಾಗಿದೆ.
ಈ ಹಿಂದೆಯೂ ಬೆದರಿಕೆ ಕರೆ ಮಾಡಿದ್ದ ಆರೋಪ:
ಘಟನೆ ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡು ಆರೋಪಿ ಕಾರ್ತಿಕ್‌ನನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಆರೋಪಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದಾನೆ ಎನ್ನಲಾಗಿದ್ದು, ಈ ಹಿಂದೆಯೂ ಹಲವು ಬಾರಿ ಬೆದರಿಕೆ ಕರೆಗಳನ್ನು ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.