ಕಾರವಾರ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿದರೆ ರಾಜ್ಯ ಸರ್ಕಾರವೂ ಬಸ್ ಪ್ರಯಾಣದ ಟಿಕೆಟ್ ದರ ಕಡಿಮೆ ಮಾಡಲಿದೆ ಎಂದು ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿವೆ. ಕೇಂದ್ರ ಸರ್ಕಾರ ಇಂಧನ ದರ ಏರಿಕೆ ಮಾಡಿದಾಗ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಸದಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಇಂದೇ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿದರೆ ರಾಜ್ಯದಲ್ಲೂ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ. ಈ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.
ಹಾಲಿನ ದರ ಏರಿಕೆ ಸಮರ್ಥಿಸಿಕೊಂಡ ಶಾಸಕ

ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡಲಾಗಿದ್ದು, ಹೆಚ್ಚುವರಿ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ. ಅವರ ನಿರ್ಧಾರದೊಂದಿಗೆ ನಾವೆಲ್ಲರೂ ಇದ್ದೇವೆ ಎಂದು ಸತೀಶ್ ಸೈಲ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಸರಿಯಲ್ಲ. ಬಜೆಟ್‌ನಲ್ಲಿಯೇ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿಡಲಾಗಿದೆ. ದೀಪಾವಳಿ ಉಡುಗೊರೆಯಾಗಿ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಗ್ಯಾರಂಟಿ ಫಲಾನುಭವಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ
ಗ್ಯಾರಂಟಿ ಯೋಜನೆಗಳ ಹೆಚ್ಚಿನ ಪ್ರಯೋಜನವನ್ನು ಬಿಜೆಪಿಯವರೇ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ ಶಾಸಕ, ಯಾರು ಎಲ್ಲಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂಬುದರ ಕುರಿತು ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಪಟ್ಟಿ ಸಿದ್ಧವಾದ ಬಳಿಕ ಪ್ರತಿ ಜಿಲ್ಲೆಯಲ್ಲಿಯೂ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.
1,500 ಕೋಟಿ ರೂ. ಅನುದಾನ ಬಂದಿರುವುದಾಗಿ ಹೇಳಿಕೆ
ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿದ ಅವರು, ತಮ್ಮ ಶಾಸಕತ್ವದ ಈ ಅವಧಿಯಲ್ಲಿ ಸುಮಾರು 1,500 ಕೋಟಿ ರೂ. ಅನುದಾನ ದೊರೆತಿದೆ ಎಂದು ತಿಳಿಸಿದರು.
ಯಾವ ಇಲಾಖೆಗೆ ಎಷ್ಟು ಹಣ ಬಿಡುಗಡೆಯಾಗಿದೆ ಮತ್ತು ಅದನ್ನು ಹೇಗೆ ಖರ್ಚು ಮಾಡಲಾಗಿದೆ ಎಂಬ ಸಂಪೂರ್ಣ ಲೆಕ್ಕ ನೀಡಲು ಸಿದ್ಧನಿದ್ದೇನೆ. ನನ್ನ ಹೇಳಿಕೆ ಸುಳ್ಳಾಗಿದ್ದರೆ ರಸ್ತೆಯಲ್ಲಿ ನಿಲ್ಲಿಸಿ ಪ್ರಶ್ನಿಸಿ ಎಂದು ಸವಾಲು ಹಾಕಿದರು.