ಉಡುಪಿ: ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಗುದ್ದಿ ಕಮರಿಗೆ ಬಿದ್ದು ಬೆಂಕಿಗಾಹುತಿಯಾದ ಘಟನೆ ಉಡುಪಿಯ ಸಾಸ್ತಾನ ಟೋಲ್ ಬಳಿ ನಡೆದಿದೆ.
ಆಟೋಗೆ ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಮರಿಗೆ ಬಿದ್ದಿದೆ. ಬಳಿಕ ಕ್ಷಣಾರ್ಧದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ.
ಈ ಅಪಘಾತದಲ್ಲಿ ಆಟೋದಲ್ಲಿದ್ದ ಮಹಿಳೆ ಹಾಗೂ ಚಾಲಕ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.