ನವದೆಹಲಿ: ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದ ಎಲ್ಲ ನಾಯಕರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸುವ ಉದ್ದೇಶವಿದೆ ಎಂದಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲಾಗುವುದು. ಸಂವಿಧಾನವು ಎಲ್ಲರೂ ಒಗ್ಗಟ್ಟಿನಿಂದ ಬದುಕಲು ಮಾರ್ಗದರ್ಶನ ನೀಡುವ ಅಮೂಲ್ಯ ಗ್ರಂಥವಾಗಿದೆ ಎಂದು ಹೇಳಿದ್ದಾರೆ.
ಸಂವಿಧಾನ ದಿನಾಚರಣೆ ಕುರಿತು ಸರ್ಕಾರದ ನಿಲುವು
ಸಂವಿಧಾನ ದಿನಾಚರಣೆಯ ಅಂಗವಾಗಿ ಮತ್ತೊಂದು ಕಾರ್ಯಕ್ರಮ ಆಯೋಜಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಯಾರು ಆಚರಣೆ ಮಾಡುತ್ತಾರೆ ಅಥವಾ ಬಿಡುತ್ತಾರೆ ಎಂಬುದು ಸರ್ಕಾರಕ್ಕೆ ಮುಖ್ಯವಲ್ಲ. ಸರ್ಕಾರದ ಅಧಿಕೃತ ಕಾರ್ಯಕ್ರಮದ ಮೇಲಷ್ಟೇ ಗಮನ ಹರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಫೋನ್ ಟ್ಯಾಪಿಂಗ್ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಡಿ.ಕೆ. ಶಿವಕುಮಾರ್ ಅವರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂಬ ಆರೋಪಗಳ ಕುರಿತು ಮಾತನಾಡಿದ ನರೇಂದ್ರಸ್ವಾಮಿ, ಈ ವಿಚಾರ ಅವರ ಅನುಭವಕ್ಕೆ ಬಂದಿರುವುದಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ಈ ಕುರಿತು ಮಾತನಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಅಹಿಂದ ಆಶಯವೇ ಕಾಂಗ್ರೆಸ್ ಪಕ್ಷದ ಉದ್ದೇಶ
ಅಹಿಂದ ಸಮಾವೇಶದ ಕುರಿತು ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷವೇ ಅಹಿಂದ ಆಶಯಗಳನ್ನು ಹೊಂದಿದೆ ಎಂದು ಹೇಳಿದ್ದಾರೆ. ಹಿಂದುಳಿದ ವರ್ಗಗಳು ಸೇರಿದಂತೆ ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸಿ ಸಮಸಮಾಜ ನಿರ್ಮಿಸುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಚಿವ ಸಂಪುಟ ಸಭೆ ವೆಚ್ಚಕ್ಕೆ ಸಮರ್ಥನೆ
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯ ವೆಚ್ಚದ ಕುರಿತು ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಕ್ಕೂ ಸಚಿವರು ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಯಾರಿಗೂ ತ್ರಿಶೂಲ ಅಥವಾ ಶಸ್ತ್ರಾಸ್ತ್ರಗಳನ್ನು ಪೂರೈಸಿ ಜನರ ಭಾವನೆಗಳೊಂದಿಗೆ ಆಟವಾಡಿಲ್ಲ ಎಂದು ಹೇಳಿದ್ದಾರೆ.
ಕರಾವಳಿ ಭಾಗದಲ್ಲಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಹಾಗೂ ಅಲ್ಲಿನ ನೈಸರ್ಗಿಕ ಸೌಂದರ್ಯವನ್ನು ಬಳಸಿಕೊಂಡು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದ್ದಾರೆ.