ಅಮರಾವತಿ: ಆಂಧ್ರಪ್ರದೇಶ ಹಾಗೂ ಪುದುಚೇರಿಯ ಯಾನಂ ನಡುವಿನ ಕರಾವಳಿಗೆ ಅಪ್ಪಳಿಸಿದ ಅರ್ನಾಬ್ ಚಂಡಮಾರುತ ಭಾರಿ ಹಾನಿ ಉಂಟುಮಾಡಿದೆ ಎಂದು ವರದಿಯಾಗಿದೆ. ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸಿದ್ದು, ಸಾವಿರಾರು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಭತ್ತ ಸೇರಿದಂತೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಕೃಷಿ ಬೆಳೆಗಳು ಹಾನಿಗೀಡಾಗಿವೆ. ಮಳೆಯಿಂದ ಉಂಟಾದ ವಿದ್ಯುತ್ ಅವಘಡಗಳು ಹಾಗೂ ಗೋಡೆ ಕುಸಿತದಂತಹ ದುರ್ಘಟನೆಗಳಲ್ಲಿ ಎಂಟು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಚಂಡಮಾರುತದಿಂದ ಮೃತಪಟ್ಟವರ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಏಲೂರು, ಪಶ್ಚಿಮ ಗೋದಾವರಿ, ಕೋನಸೀಮ, ವಿಜಯನಗರಂ ಹಾಗೂ ವಿಶಾಖಪಟ್ಟಣಂ ಸೇರಿದಂತೆ ಹತ್ತಕ್ಕೂ ಹೆಚ್ಚು ಜಿಲ್ಲೆಗಳ ನೂರಾರು ಗ್ರಾಮಗಳು ಚಂಡಮಾರುತದ ಪ್ರಭಾವಕ್ಕೆ ಒಳಗಾಗಿವೆ. ಹಲವು ಪ್ರದೇಶಗಳಲ್ಲಿ 200 ಮಿಲಿಮೀಟರ್ಗೂ ಅಧಿಕ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳು, ರಸ್ತೆಗಳು ಹಾಗೂ ಕೃಷಿ ಜಮೀನುಗಳಿಗೆ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಆಂಧ್ರಪ್ರದೇಶದ ಜೊತೆಗೆ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿಯೂ ಚಂಡಮಾರುತದ ಪರಿಣಾಮ ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಂಧ್ರಪ್ರದೇಶ ಮತ್ತು ಒಡಿಶಾ ಸರ್ಕಾರಗಳು ಕರಾವಳಿ ಭಾಗದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದರಿಂದ ಹೆಚ್ಚಿನ ಜೀವಹಾನಿಯನ್ನು ತಪ್ಪಿಸಲು ಸಾಧ್ಯವಾಗಿದೆ ಎನ್ನಲಾಗಿದೆ. ಚಂಡಮಾರುತವು ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿಯನ್ನು ದಾಟಿದ್ದು, ಕ್ರಮೇಣ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ.
ಚಂಡಮಾರುತದಿಂದ ಉಂಟಾಗಿರುವ ಹಾನಿಯ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿನ ಹಾನಿಯ ಪ್ರಾಥಮಿಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರದ ವಿಶೇಷ ತಂಡವನ್ನು ಕಳುಹಿಸುವಂತೆ ಮನವಿ ಮಾಡಿದ್ದಾರೆ. ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳಿಗಾಗಿ ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಚಂಡಮಾರುತ ದುರ್ಬಲಗೊಂಡಿದ್ದರೂ ಕರಾವಳಿ ಜಿಲ್ಲೆಗಳಲ್ಲಿ ಮತ್ತೊಂದು ದಿನ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಾಪಟ್ಲ, ಗುಂಟೂರು, ಏಲೂರು, ಪೂರ್ವ ಗೋದಾವರಿ, ಕಾಕಿನಾಡ, ಅಲ್ಲೂರಿ ಸೀತಾರಾಮ ರಾಜು, ವಿಶಾಖಪಟ್ಟಣಂ ಹಾಗೂ ವಿಜಯನಗರಂ ಸೇರಿದಂತೆ ಒಟ್ಟು 13 ಜಿಲ್ಲೆಗಳಿಗೆ ಹಠಾತ್ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇನ್ನು ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸಲು ಆಂಧ್ರಪ್ರದೇಶ ಸರ್ಕಾರ ಕ್ರಮ ಕೈಗೊಂಡಿದೆ. ಬಾಧಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ, ನೈರ್ಮಲ್ಯ ಹಾಗೂ ಆರೋಗ್ಯ ಸೇವೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗೆ ತಲಾ 25 ಕೆ.ಜಿ. ಅಕ್ಕಿ ಹಾಗೂ ಮೀನುಗಾರರಿಗೆ ತಲಾ 50 ಕೆ.ಜಿ. ಅಕ್ಕಿ ವಿತರಿಸುವುದಾಗಿ ಸರ್ಕಾರ ಘೋಷಿಸಿದೆ.
ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಜನರಿಗೆ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದ್ದು, ತಲಾ ಒಂದು ಸಾವಿರ ರೂಪಾಯಿ ಹಾಗೂ ಗರಿಷ್ಠ ಮೂರು ಸಾವಿರ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ, ರಸ್ತೆ ಸಂಚಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮರುಸ್ಥಾಪಿಸಲು ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.