ಅಕ್ಷರ ಗಾತ್ರ

DCM ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಾ.ಜಿ. ಪರಮೇಶ್ವರ್​​ ದಾಖಲು

ಕರ್ನಾಟಕದ ನಾಯಕ ಡಾ.ಜಿ. ಪರಮೇಶ್ವರ್ ಕುರ್ಚಿಯ ಮೇಲೆ ಕುಳಿತಿರುವ ದೃಶ್ಯ.

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆಯಿಂದಲೇ ಸುಸ್ತಿನ ಅನುಭವವಾಗಿದ್ದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ಯು.ಟಿ. ಖಾದರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪರಮೇಶ್ವರ್ ಆರೋಗ್ಯವಾಗಿದ್ದಾರೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ವಸಂತನಗರದಲ್ಲಿರುವ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್ ಭಾಗವಹಿಸಿದ್ದರು. ಈ ವೇಳೆ ಆಟಗಾರರಿಗೆ ಶುಭಾಶಯ ಕೋರಿದ್ದ ಅವರು, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮಕ್ಕೆ ಆಗಮಿಸುವುದಕ್ಕೂ ಮುನ್ನವೇ ಅಲ್ಲಿಂದ ತೆರಳಿದ್ದರು.

ಪರಮೇಶ್ವರ್ ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿದೆ ಎಂಬ ಮಾಹಿತಿ ಹರಿದಾಡಿದ ಹಿನ್ನೆಲೆಯಲ್ಲಿ ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ವೈದೇಹಿ ಆಸ್ಪತ್ರೆಯ ವೈದ್ಯ ಶ್ರೀನಿವಾಸ್, ಡಿಸಿಎಂ ಆಸ್ಪತ್ರೆಗೆ ನಡೆದುಕೊಂಡೇ ಬಂದಿದ್ದರು. ಅವರು ಬಂದಾಗ ಹೃದಯ ಬಡಿತ ಸ್ವಲ್ಪ ಹೆಚ್ಚಾಗಿತ್ತು. ಸದ್ಯ ಅದನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲ ಪರೀಕ್ಷೆಗಳು ಮತ್ತು ವೈದ್ಯಕೀಯ ಮೌಲ್ಯಮಾಪನದ ಬಳಿಕ ಡಾ.ಜಿ.ಪರಮೇಶ್ವರ್ ಅವರನ್ನು ಇಂದೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.