ಅಕ್ಷರ ಗಾತ್ರ

ಕನಕಪುರದಲ್ಲಿ ಜನರ ಅಹವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್; ರೈತರ ಹೋರಾಟದ ಕುರಿತು ಸಿಎಂ ಹೇಳಿದ್ದೇನು?

DK Shivakumar residence and Vidhana Soudha bomb threat case suspect arrest by Sadashivanagar police
ಸಿಎಂ ಡಿ.ಕೆ. ಶಿವಕುಮಾರ್ ನಿವಾಸ ಹಾಗೂ ವಿಧಾನಸೌಧಕ್ಕೆ ಬೆದರಿಕೆ ಕರೆ ಹಾಕಿದ್ದ ಆರೋಪಿಯನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಮನಗರ: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕನಕಪುರದ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ರಾತ್ರಿ ರಾಮನಗರದಲ್ಲಿ ಕಾರ್ಯಕ್ರಮ ಮುಗಿಸಿ ಕನಕಪುರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ಬೆಳಗ್ಗೆ ಬೆಂಗಳೂರಿಗೆ ತೆರಳುವ ಮುನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಮಾತನಾಡಿದ ಅವರು, ಮುಂದಿನ ವಾರ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡಿ ಸಾರ್ವಜನಿಕರ ಎಲ್ಲಾ ಅಹವಾಲುಗಳನ್ನು ಸ್ವೀಕರಿಸುವುದಾಗಿ ಭರವಸೆ ನೀಡಿದರು.

ಇಂದು ದೆಹಲಿಗೆ ಪ್ರಯಾಣ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಇಂದು ಮಧ್ಯಾಹ್ನ ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

“ಸಂಜೆ ರಾಹುಲ್ ಗಾಂಧಿ ಅವರು ಎಲ್ಲಾ ರಾಜ್ಯಗಳ ಪಿಸಿಸಿ ಅಧ್ಯಕ್ಷರು ಹಾಗೂ ಸಿಎಲ್‌ಪಿ ನಾಯಕರೊಂದಿಗೆ ಪ್ರಮುಖ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದೇನೆ. ಸದ್ಯಕ್ಕೆ ಯಾವುದೇ ಕೇಂದ್ರ ಸಚಿವರನ್ನು ಭೇಟಿಯಾಗುವ ಯೋಜನೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಮೆಟ್ರೋ ಯೋಜನೆ ನಮ್ಮ ರಾಜ್ಯದ ಜನರ ಹಣದ್ದು

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಮೆಟ್ರೋ ಮಾರ್ಗ ಉದ್ಘಾಟಿಸಲಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, ಮೆಟ್ರೋ ಉದ್ಘಾಟನೆಗೆ ಪ್ರಧಾನಿಯವರನ್ನು ಆಹ್ವಾನಿಸಿದ್ದೇವೆ ಎಂದರು.

ಆದರೆ, ಬಿಜೆಪಿ ನಾಯಕರು ಈಗಾಗಲೇ ಯೋಜನೆಯ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಮೆಟ್ರೋ ಯೋಜನೆ ರಾಜ್ಯದ ಜನರ ಹಣದಿಂದ ನಿರ್ಮಾಣವಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಸಾಲವನ್ನೂ ಮಾಡಿದೆ ಎಂದು ಹೇಳಿದರು.

ರೈತರು ಸೌಜನ್ಯದಿಂದ ವರ್ತಿಸಬೇಕು

ಕಬ್ಬು ಬೆಳೆಗಾರರ ಹೋರಾಟ ಅಂತ್ಯಗೊಳಿಸುವ ವಿಚಾರವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ರೈತರಲ್ಲಿ ಹೋರಾಟವನ್ನು ಶಾಂತಿಯುತವಾಗಿ ಮುನ್ನಡೆಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಸಚಿವರು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೆಲವು ರೈತರು ಕಾರ್ಖಾನೆಗಳ ಆರಂಭಕ್ಕೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೂ ಮಾತನಾಡಿದ್ದು, ಅವರು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಸಭೆಗಳಲ್ಲಿ ರೈತರು ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದ ಅವರು, “ಏಯ್ ಬಾರೋ, ಹೋಗೋ ಎಂದು ಅಗೌರವದಿಂದ ಮಾತನಾಡುವುದು ಸರಿಯಲ್ಲ. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ಬೆದರಿಸುವ ಕೆಲಸ ಮಾಡಬಾರದು” ಎಂದು ತಿಳಿಸಿದರು. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸರ್ಕಾರ ಮಾತುಕತೆ ಮೂಲಕ ಪ್ರಯತ್ನಿಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.