ಅಕ್ಷರ ಗಾತ್ರ

ಬಿಜೆಪಿ ವಿರುದ್ಧ ಪ್ರತಿಭಟಿಸಿದರೆ ಎಲ್ಲವೂ ಫ್ರೀನಾ? ಸಿಜೆಪಿ ಪ್ರತಿಭಟನೆಯ ಸಭಾಂಗಣ ಬಾಡಿಗೆ ವಿಚಾರದಲ್ಲಿ ಆರ್. ಅಶೋಕ್ ಪ್ರಶ್ನೆಗಳ ಸುರಿಮಳೆ!

CJP ಪ್ರತಿಭಟನಾಕಾರರ ಚಿತ್ರದ ಪಕ್ಕದಲ್ಲಿ ಮಾತನಾಡುತ್ತಿರುವ ಆರ್. ಅಶೋಕ್ ಅವರ ಚಿತ್ರ.

ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಿರುದ್ಧ ಸಭಾಂಗಣದ ಬಾಡಿಗೆ ಪಾವತಿಸದ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪ್ರತಿಭಟನೆಗೆ ಉಚಿತವಾಗಿ ಸಭಾಂಗಣ ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಅಕ್ಟೋಬರ್ 8ರಂದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕ್ರಮವನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ನಟ ಪ್ರಕಾಶ್ ರಾಜ್, ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಯೂಟ್ಯೂಬರ್ ಧ್ರುವ ರಾಠಿ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಈ ಪ್ರತಿಭಟನೆಗೆ ಫ್ರೀಡಂ ಪಾರ್ಕ್‌ನ ಸಭಾಂಗಣ ಬಳಸಿಕೊಂಡಿದ್ದರೂ ನಿಗದಿತ ಬಾಡಿಗೆ ಪಾವತಿಸಿಲ್ಲ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಯಾವುದೇ ಸಂಘಟನೆ ಸಭಾಂಗಣ ಬಳಸಬೇಕಾದರೆ ಒಂದು ಲಕ್ಷ ರೂಪಾಯಿ ಬಾಡಿಗೆ ಪಾವತಿಸಬೇಕು. ಆದರೆ ಸಿಜೆಪಿ ನಡೆಸಿದ ಪ್ರತಿಭಟನೆಗೆ ಒಂದು ರೂಪಾಯಿಯನ್ನೂ ಪಡೆಯಲಾಗಿಲ್ಲ ಎಂದು ದೂರಿದ್ದಾರೆ.

ಬೆಂಗಳೂರಿನ ಶಾಸಕರೊಬ್ಬರು ಹಾಗೂ ಕೆಲವು ಮುಖಂಡರು ಸಭಾಂಗಣದ ಬಾಡಿಗೆ ಪಡೆಯದಂತೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದಾರೆ ಎಂಬ ಆರೋಪವನ್ನೂ ಅಶೋಕ್ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವ ಸಂಘಟನೆಗಳಿಗೆ ಕಾಂಗ್ರೆಸ್ ಸರ್ಕಾರ ವಿಶೇಷ ಅನುಕೂಲ ಕಲ್ಪಿಸುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಬರದಿಂದ ಸಂಕಷ್ಟದಲ್ಲಿರುವ ರೈತರು, ಗೌರವಧನ ಹೆಚ್ಚಳಕ್ಕೆ ಆಗ್ರಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರೂ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಾರೆ. ಅವರಿಗೂ ಇದೇ ರೀತಿಯ ಉಚಿತ ಸೌಲಭ್ಯ ಕಲ್ಪಿಸಲಾಗಿದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಿಜೆಪಿ ಪ್ರತಿಭಟನೆಗೆ ಸಂಬಂಧಿಸಿದಂತೆ ಸಭಾಂಗಣದ ಬಾಡಿಗೆಯಾಗಿ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಕೂಡಲೇ ಬಹಿರಂಗಪಡಿಸಬೇಕು. ಒಂದು ವೇಳೆ ಸಿಜೆಪಿಗೆ ಉಚಿತವಾಗಿ ಅವಕಾಶ ನೀಡಿದ್ದರೆ, ಉಳಿದ ಎಲ್ಲ ಸಂಘಟನೆಗಳಿಗೂ ಯಾವುದೇ ಶುಲ್ಕವಿಲ್ಲದೆ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.

 

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.