ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ನವೆಂಬರ್ 7ರಿಂದ 10ರವರೆಗೆ ಈ ವಿಶೇಷ ರೈಲುಗಳು ಸಂಚರಿಸಲಿವೆ.
ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಬೆಳಗಾವಿಗೆ ಎರಡು ಟ್ರಿಪ್ ಹಾಗೂ ಬೆಳಗಾವಿಯಿಂದ ಬೆಂಗಳೂರಿಗೆ ಎರಡು ಟ್ರಿಪ್ ರೈಲು ಸಂಚಾರ ನಡೆಸಲಿವೆ. ಈ ರೈಲುಗಳು ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ ಹಾಗೂ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸಲಿವೆ.
ಬೆಂಗಳೂರಿನಿಂದ ಬೆಳಗಾವಿಗೆ ರೈಲು ಸಂಚಾರ
ಬೆಂಗಳೂರಿನಿಂದ ನವೆಂಬರ್ 7 ಮತ್ತು 9ರಂದು ರಾತ್ರಿ 7 ಗಂಟೆಗೆ ವಿಶೇಷ ರೈಲು ಹೊರಡಲಿದೆ. ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿಯಿಂದ ಬೆಂಗಳೂರಿಗೆ ರೈಲು ಸಂಚಾರ
ಬೆಳಗಾವಿಯಿಂದ ನವೆಂಬರ್ 8 ಮತ್ತು 10ರಂದು ಸಂಜೆ 5.30ಕ್ಕೆ ವಿಶೇಷ ರೈಲು ಹೊರಡಲಿದೆ. ಮರುದಿನ ಬೆಳಗ್ಗೆ 5 ಗಂಟೆಗೆ ಬೆಂಗಳೂರು ತಲುಪಲಿದೆ.
ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ
ಈ ವಿಶೇಷ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ ಹಾಗೂ ಧಾರವಾಡ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಊರಿಗೆ ತೆರಳುವ ಪ್ರಯಾಣಿಕರಿಗೆ ಈ ವಿಶೇಷ ರೈಲು ಸೇವೆಯಿಂದ ಅನುಕೂಲವಾಗಲಿದೆ.