ಅಕ್ಷರ ಗಾತ್ರ

ರಾಜ್ಯಾದ್ಯಂತ ಆಸ್ತಿ ಗೈಡೆನ್ಸ್ ಮೌಲ್ಯ ಪರಿಷ್ಕರಣೆಗೆ ಸರ್ಕಾರದ ಸಿದ್ಧತೆ: ಡಾ. ಜಿ. ಪರಮೇಶ್ವರ್ ಹೇಳಿದ್ದೇನು..?

ಮೈಕ್ರೋಫೋನ್ ಹಿಡಿದು ಮಾತನಾಡುತ್ತಿರುವ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್.

ಬೆಂಗಳೂರು: ರಾಜ್ಯಾದ್ಯಂತ ಆಸ್ತಿ ಮಾರ್ಗಸೂಚಿ ಮೌಲ್ಯವನ್ನು (Guidance Value) ಅನುಪಾತದ ಆಧಾರದಲ್ಲಿ ಪರಿಷ್ಕರಿಸುವ ಕುರಿತು ಸರ್ಕಾರ ವಿಶ್ಲೇಷಣೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಜೀವನ ವೆಚ್ಚ ಹೆಚ್ಚಾಗುತ್ತಿರುವುದರ ಜೊತೆಗೆ ಖಾಸಗಿ ಮಾರುಕಟ್ಟೆಯಲ್ಲಿ ಭೂಮಿಯ ಮೌಲ್ಯವೂ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಸರ್ಕಾರಿ ಮಾರ್ಗಸೂಚಿ ಮೌಲ್ಯ ಮತ್ತು ಖಾಸಗಿ ಮಾರುಕಟ್ಟೆ ದರಗಳ ನಡುವೆ ಭಾರಿ ವ್ಯತ್ಯಾಸವಿದೆ ಎಂದು ಹೇಳಿದರು.

ಸರ್ಕಾರದ ಮಾರ್ಗಸೂಚಿ ಮೌಲ್ಯದಲ್ಲಿ ಒಂದು ಎಕರೆ ಭೂಮಿಗೆ ₹5 ಕೋಟಿ ಇದ್ದರೆ, ಖಾಸಗಿ ಮಾರುಕಟ್ಟೆಯಲ್ಲಿ ಅದೇ ಭೂಮಿಯ ಬೆಲೆ ₹20 ಕೋಟಿವರೆಗೂ ಇರಬಹುದು. ಇಂತಹ ವ್ಯತ್ಯಾಸದಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಗೈಡೆನ್ಸ್ ಮೌಲ್ಯ ಪರಿಷ್ಕರಣೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ದರ ಪರಿಷ್ಕರಣೆ

ವಿಶ್ಲೇಷಣೆ ಪೂರ್ಣಗೊಂಡ ಬಳಿಕ ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ದರ ಹೆಚ್ಚಳ ಮಾಡಬೇಕು ಎಂಬುದನ್ನು ನಿರ್ಧರಿಸಲಾಗುವುದು. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳಿಗೆ ಅನುಗುಣವಾಗಿ ಮಾರ್ಗಸೂಚಿ ಮೌಲ್ಯ ಪರಿಷ್ಕರಿಸುವ ಉದ್ದೇಶವಿದೆ. ಇತರ ಜಿಲ್ಲೆಗಳಲ್ಲಿ ತಾಲೂಕು ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದರ ನಿಗದಿಪಡಿಸುವ ಸಾಧ್ಯತೆಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.

ಕೇಂದ್ರದಿಂದ ಪರಿಹಾರ ಪಡೆಯಲು ಮೂರು ಬಾರಿ ಮನವಿ

ಇದೇ ವೇಳೆ ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯುವ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಮೂರು ಬಾರಿ ಕೇಂದ್ರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ ಬಳಿಕ ಕೇಂದ್ರ ಕೃಷಿ ಸಚಿವರು, ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಗಳ ಕಚೇರಿಗೆ ಭೇಟಿ ಮಾಡಲು ಸಮಯಾವಕಾಶ ಕೋರಿದ್ದೇವೆ. ಖುದ್ದಾಗಿ ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಿ ರೈತರಿಗೆ ಪರಿಹಾರ ನೀಡುವಂತೆ ಮನವಿ ಮಾಡುವುದು ನಮ್ಮ ಉದ್ದೇಶವಾಗಿತ್ತು. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.

ರೈತರ ಸಂಕಷ್ಟದಲ್ಲಿ ರಾಜಕೀಯ ಮಾಡಬೇಡಿ

ಕಳೆದ ಬಾರಿಯೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿಭಟನೆ ನಡೆಸಿ, ಸುಪ್ರೀಂ ಕೋರ್ಟ್ ಮೊರೆ ಹೋದ ಬಳಿಕ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪರಿಹಾರ ಬಿಡುಗಡೆಯಾಗಿತ್ತು. ಆದರೂ ಕೇವಲ ₹3,500 ಕೋಟಿ ಮಾತ್ರ ನೀಡಲಾಗಿತ್ತು ಎಂದು ಪರಮೇಶ್ವರ್ ಹೇಳಿದರು.

ಈ ಬಾರಿಯೂ ಅದೇ ಪರಿಸ್ಥಿತಿ ಮರುಕಳಿಸುವುದಿಲ್ಲ ಎಂಬ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಬೇರೆ ರೀತಿಯಲ್ಲಿ ಯೋಚಿಸಬಾರದು. ಜನರು ಸಂಕಷ್ಟದಲ್ಲಿದ್ದಾರೆ, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳಲ್ಲೂ ರೈತರಿದ್ದಾರೆ. ಹೀಗಾಗಿ ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಅವರು ಮನವಿ ಮಾಡಿದರು.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.