ಅಕ್ಷರ ಗಾತ್ರ

ಕರ್ನಾಟಕದಲ್ಲಿ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಭಾರೀ ಮಳೆ ನಡುವೆ ರಸ್ತೆಯಲ್ಲಿ ಚಲಿಸುತ್ತಿರುವ ಸ್ಕೂಟರ್ ಮತ್ತು ಕಾರುಗಳು

ಬೆಂಗಳೂರು: ರಾಜ್ಯದಲ್ಲಿ ಈಶಾನ್ಯ ಮಾರುತಗಳು ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ವಿವಿಧ ಕಡೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಜಡಿಮಳೆ, ಬಿರುಗಾಳಿ ಭೀತಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕಡಲ ತೀರದ ಈ ಭಾಗಗಳಲ್ಲಿ ಆಗಾಗ್ಗೆ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಬೆಂಗಳೂರು ಹಾಗೂ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆ ಮುಂದುವರಿಯಲಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲೂ ವರುಣನಾರ್ಭಟ: ಬೆಳಗಾವಿ, ಗದಗ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ. ಈ ಪ್ರದೇಶಗಳಲ್ಲಿ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.