ಅಕ್ಷರ ಗಾತ್ರ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ; ಬೆಂಗಳೂರು ಸೇರಿ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ, ಕೆಲವೆಡೆ ಭಾರಿ ಮಳೆ

Bengaluru Vidhana Soudha ಬಳಿ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಚಲಿಸುತ್ತಿರುವ BMTC ಬಸ್ಸು.

ಬೆಂಗಳೂರು: ರಾಜ್ಯಾದ್ಯಂತ ವಾಯುಭಾರ ಕುಸಿತ ಹಾಗೂ ಸುಳಿಗಾಳಿಯ ಪ್ರಭಾವದಿಂದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಆರಂಭವಾಗಿದ್ದು, ವಾತಾವರಣ ತಂಪಾಗಿದೆ. ಮಳೆಯ ನಡುವೆಯೂ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಮತ್ತು ತರಕಾರಿ ಖರೀದಿಗಾಗಿ ಸಾರ್ವಜನಿಕರು ಆಗಮಿಸುತ್ತಿದ್ದು, ವ್ಯಾಪಾರ ವಹಿವಾಟು ಬಿರುಸಿನಿಂದ ಸಾಗಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ನಾಳೆಯೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವುದರ ಜೊತೆಗೆ ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೊಡಗು, ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಒಟ್ಟಿನಲ್ಲಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದ್ದು, ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸುವಂತೆ ಸೂಚಿಸಲಾಗಿದೆ.

 

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.