ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಲೀಕ್ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.
ತನಿಖೆಯಿಂದ ದೂರ ಉಳಿಯದೆ ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದೆ.
ಜೈಲಿನ ವಿಡಿಯೋ ಸೋರಿಕೆ ಪ್ರಕರಣದ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಧನ್ವೀರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ನಟ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯುವ ಸಂದರ್ಭದಲ್ಲಿ ಸರ್ಕಾರದ ಪರ ವಕೀಲ ಅನೂಪ್ ಕುಮಾರ್ ಮಹತ್ವದ ಅಂಶಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಈ ಹಿಂದೆ ನ್ಯಾಯಾಲಯ ವಾರೆಂಟ್‌ಗೆ ತಡೆ ನೀಡಿದ್ದರೂ ಧನ್ವೀರ್ ತನಿಖೆಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಅವರು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಾಲಯ, ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುವಂತೆ ಧನ್ವೀರ್‌ಗೆ ನಿರ್ದೇಶನ ನೀಡಿದೆ. ಈ ಮೂಲಕ ಜೈಲು ವಿಡಿಯೋ ಸೋರಿಕೆ ಪ್ರಕರಣದ ತನಿಖೆಯಲ್ಲಿ ನಟನ ಹಾಜರಾತಿ ಮತ್ತೆ ಗಮನ ಸೆಳೆದಿದೆ.