ಕಾಬೂಲ್: ಅಫ್ಘಾನಿಸ್ತಾನದ ಕುನಾರ್ ಪ್ರಾಂತ್ಯದಲ್ಲಿ ಶಾಲೆಯೊಂದರ ಸಮೀಪ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಆರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಸುಮಾರು 100 ಮಂದಿ ಗಾಯಗೊಂಡಿದ್ದಾರೆ.
ಗಣಿಗಾರಿಕೆ ಕಾರ್ಮಿಕರು ಡೈನಮೈಟ್ ಸಂಗ್ರಹಿಸಿಟ್ಟಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಸ್ಥಳೀಯ ಕಾಲಮಾನ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಶಾಲೆಯ ಪಕ್ಕದ ಮನೆಯಲ್ಲಿತ್ತು ಡೈನಮೈಟ್:
ಈ ಕುರಿತು ಮಾಹಿತಿ ನೀಡಿರುವ ಮಾಹಿತಿ ಮತ್ತು ಸಂಸ್ಕೃತಿ ನಿರ್ದೇಶಕ ಮಾವ್ಲಾವಿ ಸಮಿ-ಉಲ್-ಹಕ್, ಮಧ್ಯಮ ಶಾಲೆಯ ಪಕ್ಕದಲ್ಲಿದ್ದ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಈ ಮನೆ ಗಣಿಗಾರಿಕೆ ಕಾರ್ಯಾಚರಣೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸೇರಿದ್ದು, ಅವರು ಅಲ್ಲಿ ಡೈನಮೈಟ್ ಸಂಗ್ರಹಿಸಿಟ್ಟಿದ್ದರು ಎಂದು ಹೇಳಿದ್ದಾರೆ.
ಆದರೆ, ಸ್ಫೋಟ ಸಂಭವಿಸಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ತನಿಖೆಗೆ ಅಧಿಕಾರಿಗಳ ತಂಡ:
ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆ ತನಿಖಾ ತಂಡಗಳು ಕುನಾರ್ ಪ್ರಾಂತ್ಯಕ್ಕೆ ಧಾವಿಸಿವೆ. ಪೂರ್ವ ಅಫ್ಘಾನಿಸ್ತಾನದಲ್ಲಿರುವ ಕುನಾರ್ ಪ್ರಾಂತ್ಯವು ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿದೆ. ಹೀಗಾಗಿ, ಗಡಿ ಭಾಗದಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಸ್ಫೋಟದ ಹಿಂದಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದ್ದು, ಗಾಯಾಳುಗಳ ಸ್ಥಿತಿ ಹಾಗೂ ಸಾವಿನ ಸಂಖ್ಯೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.