ಬೆಂಗಳೂರು: ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳ ಅಬ್ಬರ ಜೋರಾಗಿದೆ. ಒಂದು ಕಡೆ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಕಳೆದ ಒಂಬತ್ತು ದಿನಗಳಿಂದ ಹೋರಾಟ ಮುಂದುವರಿಸಿದ್ದಾರೆ. ಮತ್ತೊಂದೆಡೆ ಬಿಸಿಯೂಟ ಕಾರ್ಯಕರ್ತೆಯರು ಹಾಗೂ ಶಿಕ್ಷಣ ತಜ್ಞರು ರಾಜ್ಯ ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆ, ಶಾಲಾ ದತ್ತು ಯೋಜನೆ ಮತ್ತು ಮೆಂಟರ್ ಯೋಜನೆಗಳನ್ನು ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಸುತ್ತಮುತ್ತ ಪ್ರತಿಭಟನೆಯ ಕಾವು ಹೆಚ್ಚಾಗಿದೆ.
ಕ್ಲಸ್ಟರ್ ಕಿಚನ್ ವಿರುದ್ಧ ಬಿಸಿಯೂಟ ಕಾರ್ಯಕರ್ತೆಯರ ಆಕ್ರೋಶ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳು ಹಾಗೂ ಸಂಘಟನೆಗಳಿಗೆ ವಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ. ಇದನ್ನು ವಿರೋಧಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಾಲೆಗಳಲ್ಲಿ ಮಕ್ಕಳಿಗೆ ಊಟ ತಯಾರಿಸುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದು ಸರಿಯಲ್ಲ ಎಂಬುದು ಕಾರ್ಯಕರ್ತೆಯರ ವಾದವಾಗಿದೆ. ಈ ಸಂಬಂಧ ಮುಖ್ಯಶಿಕ್ಷಕರು ಕೂಡ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 1.20 ಲಕ್ಷ ಬಿಸಿಯೂಟ ಕಾರ್ಯಕರ್ತೆಯರಿದ್ದು, ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ಬಂದರೆ ಸುಮಾರು 60 ಸಾವಿರ ಮಂದಿ ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ ಎಂದು ಅವರು ಹೇಳಿದ್ದಾರೆ. ಇದು ತಮ್ಮ ಬದುಕು ಮತ್ತು ಉದ್ಯೋಗದ ಪ್ರಶ್ನೆಯಾಗಿದ್ದು, ಸರ್ಕಾರ ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷೆ ಹನುಮಕ್ಕ ಒತ್ತಾಯಿಸಿದ್ದಾರೆ.
ಪ್ರತಿಭಟನೆಗೆ ಪೊಲೀಸರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಅವಕಾಶ ಕಲ್ಪಿಸಿದ್ದು, ರಸ್ತೆ ಬಂದ್ ಮಾಡಿ ಧರಣಿ ನಡೆಸಲು ಕಾರ್ಯಕರ್ತೆಯರು ಮುಂದಾಗಿದ್ದಾರೆ.
ಶಾಲಾ ದತ್ತು, ಮೆಂಟರ್ ಯೋಜನೆ ವಿರುದ್ಧ ಶಿಕ್ಷಣ ತಜ್ಞರ ಹೋರಾಟ
ಇನ್ನೊಂದೆಡೆ ಸರ್ಕಾರಿ ಶಾಲೆಗಳ ದತ್ತು ಯೋಜನೆ ಹಾಗೂ ಮೆಂಟರ್ ಯೋಜನೆಯನ್ನು ವಿರೋಧಿಸಿ ಸಾಹಿತಿಗಳು, ಶಿಕ್ಷಣ ತಜ್ಞರು ಮತ್ತು ಹೋರಾಟಗಾರರು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.
ದಾನ ಅಥವಾ ದತ್ತು ಯೋಜನೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಅಪಾಯ ಉಂಟುಮಾಡಬಹುದು ಎಂಬುದು ಪ್ರತಿಭಟನಾಕಾರರ ವಾದವಾಗಿದೆ. ಸರ್ಕಾರಿ ಶಾಲೆಗಳ ಸಂಪೂರ್ಣ ನಿರ್ವಹಣೆ ಮತ್ತು ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದರ ಜೊತೆಗೆ ಮೂರು ತಿಂಗಳೊಳಗೆ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೊಳಿಸುವ ಕುರಿತು ಕಾರ್ಯಯೋಜನೆ ಪ್ರಕಟಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಶಾಲೆಗಳಿಗೆ ಅನುದಾನ ನೀಡಲು ಸ್ಪಷ್ಟ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ತಮ್ಮ ಬೇಡಿಕೆಗಳ ಕುರಿತು ಲಿಖಿತ ಭರವಸೆ ನೀಡಬೇಕು. ಅಲ್ಲಿಯವರೆಗೆ ಹೋರಾಟವನ್ನು ಮುಂದುವರಿಸುವುದಾಗಿ ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಹೋರಾಟದ ಜೊತೆಗೆ ಬಿಸಿಯೂಟ ಕಾರ್ಯಕರ್ತೆಯರು ಮತ್ತು ಶಿಕ್ಷಣ ತಜ್ಞರ ಪ್ರತಿಭಟನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಸರ್ಕಾರ ಈ ಬೇಡಿಕೆಗಳಿಗೆ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.