ಬೆಂಗಳೂರು: ನಗರದ ಮೆಟ್ರೋ ಕಾಮಗಾರಿಗಳು ವಿಳಂಬವಾಗುತ್ತಿರುವುದು ಹಾಗೂ ರಸ್ತೆಗಳ ದುಸ್ಥಿತಿಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ಕೃಷ್ಣಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆ.ಆರ್. ಪುರಂನಿಂದ ಹೆಬ್ಬಾಳ ಮೂಲಕ ವಿಮಾನ ನಿಲ್ದಾಣ ರಸ್ತೆಯವರೆಗಿನ ಮೆಟ್ರೋ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿ ನಿರ್ವಹಣೆ ಮತ್ತು ರಸ್ತೆ ಸಂಚಾರದ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್ ಮುಂಭಾಗದಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯ ಪ್ರಗತಿ ಪರಿಶೀಲನೆ ವೇಳೆ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಸಾಗದಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಗುತ್ತಿಗೆದಾರರು ಸಣ್ಣಪುಟ್ಟ ಸಮಸ್ಯೆಗಳನ್ನೂ ಪರಿಹರಿಸದೆ ವಿಳಂಬ ಮಾಡುತ್ತಿರುವುದಾಗಿ ಆಕ್ಷೇಪಿಸಿದರು.
ರಸ್ತೆ ದುಸ್ಥಿತಿ ಕಂಡು ಅಧಿಕಾರಿಗಳಿಗೆ ಪ್ರಶ್ನೆ:
ಮೆಟ್ರೋ ಕಾಮಗಾರಿಯಿಂದಾಗಿ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿದ್ದು, ವಾಹನ ಸವಾರರು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯ ಬಹುಭಾಗಕ್ಕೆ ಬ್ಯಾರಿಕೇಡ್‌ಗಳನ್ನು ಅಳವಡಿಸಿರುವುದರಿಂದ ಸಂಚಾರಕ್ಕೆ ಸಾಕಷ್ಟು ಜಾಗ ಇಲ್ಲದಿರುವುದನ್ನೂ ಸಚಿವರು ಗಮನಿಸಿದರು.

ಈ ವೇಳೆ ಮುಖ್ಯ ಎಂಜಿನಿಯರ್ ಅವರನ್ನು ಪ್ರಶ್ನಿಸಿದ ಕೃಷ್ಣಬೈರೇಗೌಡ, ರಸ್ತೆಯ ಸ್ಥಿತಿಯಲ್ಲಿ ವಾಹನಗಳು ಹೇಗೆ ಸಂಚರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳೇ ರಸ್ತೆ ಸಮಸ್ಯೆಗಳಿಗೆ ಸಮರ್ಪಕ ಉತ್ತರ ನೀಡಬೇಕು ಎಂದು ಸೂಚಿಸಿದರು.
ಅನಗತ್ಯ ಬ್ಯಾರಿಕೇಡ್ ತೆರವಿಗೆ ಗಡುವು:
ಮೆಟ್ರೋ ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ಮಾತ್ರ ಬಳಸಬೇಕು. ಕಾಮಗಾರಿ ನೆಪದಲ್ಲಿ ಸಾರ್ವಜನಿಕ ರಸ್ತೆಗಳ ಹೆಚ್ಚಿನ ಭಾಗವನ್ನು ಬ್ಯಾರಿಕೇಡ್‌ಗಳಿಂದ ಮುಚ್ಚಬಾರದು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಬಾರದು ಎಂದು ಎಚ್ಚರಿಸಿದ ಅವರು, ಅನಗತ್ಯವಾಗಿ ಅಳವಡಿಸಿರುವ ಬ್ಯಾರಿಕೇಡ್‌ಗಳನ್ನು ಮುಂದಿನ ಮಂಗಳವಾರದೊಳಗೆ ತೆರವುಗೊಳಿಸುವಂತೆ ಗಡುವು ನೀಡಿದರು.
ನವೆಂಬರ್ ಮೊದಲ ವಾರದಲ್ಲಿ ಪಿಂಕ್ ಲೈನ್ ಮೆಟ್ರೋ ಆರಂಭದ ಗುರಿ:
ಇನ್ನೊಂದೆಡೆ, ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ. ಅನುಮತಿ ಕೋರಿ ಪತ್ರ ಬರೆಯಲಾಗಿದ್ದರೂ ಇನ್ನೂ ಉತ್ತರ ಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಈ ಕುರಿತು ಚರ್ಚಿಸಲು ಮುಂದಿನ ವಾರ ದೆಹಲಿಗೆ ತೆರಳುವುದಾಗಿ ತಿಳಿಸಿರುವ ಸಚಿವರು, ನವೆಂಬರ್ ಮೊದಲ ವಾರದಲ್ಲಿ ಪಿಂಕ್ ಲೈನ್ ಮೆಟ್ರೋ ಸೇವೆ ಆರಂಭಿಸುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ.
ಮೆಟ್ರೋ ಕಾಮಗಾರಿಗಳು ವೇಗ ಪಡೆದುಕೊಳ್ಳುವುದರ ಜೊತೆಗೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.