ಅಕ್ಷರ ಗಾತ್ರ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಹೊಸ ತಿರುವು; ಹೆಚ್.ಡಿ. ಕುಮಾರಸ್ವಾಮಿ ನಿವಾಸದಲ್ಲಿ ಸ್ಥಳ ಮಹಜರಿಗೆ ಸಿಸಿಬಿ ಸಿದ್ಧತೆ!

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೇಳಿಕೆ ಬೆನ್ನಲ್ಲೇ ಪ್ರಕರಣದ ತನಿಖೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ದೆಹಲಿಯ ನಿವಾಸದ ಉಲ್ಲೇಖ ಕೇಳಿಬಂದಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.

ಸ್ಟಿಂಗ್ ವಿಡಿಯೋ ಹಂಚಿಕೆ ಪ್ರಕರಣದ ಹಿಂದೆ ಇರುವವರ ಪತ್ತೆಗೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಪ್ರಜ್ವಲ್ ಪ್ರಸಾದ್ ಮತ್ತು ರಿತೇಶ್ ಪಾಂಡೆ ನಡುವೆ ಹಣಕಾಸಿನ ವಹಿವಾಟು ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸೀಮಂತ್ ಕುಮಾರ್ ಸಿಂಗ್, ಕುಮಾರಸ್ವಾಮಿ ಅವರ ಸಾಮಾಜಿಕ ಜಾಲತಾಣ ತಂಡದ ಸದಸ್ಯ ಪ್ರಜ್ವಲ್ ಪ್ರಸಾದ್ ಸೂಚನೆ ಮೇರೆಗೆ ರಿತೇಶ್ ಪಾಂಡೆ ಹಾಗೂ ಆತನ ಸಹಚರ ವಿನೋದ್ ಶರ್ಮಾ ದೆಹಲಿಯ ಕರೋಲ್ ಬಾಗ್‌ನ ಅಂಗಡಿಯೊಂದರಲ್ಲಿ ಮೊಬೈಲ್ ಖರೀದಿಸಿದ್ದರು. ಈ ಸಂಬಂಧ ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಖರೀದಿಸಿದ ಮೊಬೈಲ್ ಅನ್ನು ದೆಹಲಿಯಲ್ಲಿರುವ ಹೆಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ಪ್ರಜ್ವಲ್ ಪ್ರಸಾದ್‌ಗೆ ಹಸ್ತಾಂತರಿಸಲಾಗಿದೆ. ಅಲ್ಲದೆ, ರಿತೇಶ್ ಪಾಂಡೆ ಮತ್ತು ಪ್ರಜ್ವಲ್ ಪ್ರಸಾದ್ ಇಬ್ಬರೂ ಕುಮಾರಸ್ವಾಮಿ ಅವರ ನಿವಾಸದಲ್ಲಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಆಯುಕ್ತರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನು ತಮ್ಮ ವಿರುದ್ಧವೇ ತನಿಖೆ ತಿರುಗಲಿದೆ ಎಂದು ಈ ಹಿಂದೆ ಹೇಳಿದ್ದ ಕುಮಾರಸ್ವಾಮಿ ಅವರ ಹೆಸರು ಇದೀಗ ಪ್ರಕರಣದ ತನಿಖೆಯಲ್ಲಿ ಪ್ರಸ್ತಾಪವಾಗಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ನಾಯಕರು ಆರೋಪಿಸಿದ್ದಾರೆ.

ಇದೇ ವಿಚಾರವಾಗಿ ಪೊಲೀಸ್ ಆಯುಕ್ತರು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಲು ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜೆ.ಪಿ. ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಒಟ್ಟಿನಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಯಾವೆಲ್ಲ ಬೆಳವಣಿಗೆಗಳು ನಡೆಯಲಿವೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಕುಮಾರಸ್ವಾಮಿ ಅವರ ಸುದ್ದಿಗೋಷ್ಠಿಯಲ್ಲಿ ಈ ಪ್ರಕರಣದ ಕುರಿತು ಯಾವ ಮಾಹಿತಿ ಹೊರಬರಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.