ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪ್ರತಿಭಟನೆಗೆ ಹೆದರಿ ಜ್ಞಾನೇಶ್ ಕುಮಾರ್ ಅವರಿಗೆ ಸರಿಯಾಗಿ ನಿದ್ದೆಯೂ ಬರುತ್ತಿಲ್ಲ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಸುಪ್ರೀಂ ಕೋರ್ಟ್‌ಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ವಿರುದ್ಧದ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪೊಲೀಸರ ಬಗ್ಗೆಯೂ ರಾಹುಲ್ ಗಾಂಧಿ ಹೇಳಿಕೆ
ಪ್ರತಿಭಟನೆಯ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿರುವುದರಿಂದ ಹೋರಾಟಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಭಾವಿಸಬಹುದು. ಆದರೆ, ಪ್ರತಿಭಟನಾಕಾರರು ದಣಿದರೆ ಪೊಲೀಸರೂ ದಣಿದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪೊಲೀಸ್ ಇಲಾಖೆಯ ಶೇ. 50ರಷ್ಟು ಸಿಬ್ಬಂದಿ ತಮ್ಮ ಹೋರಾಟವನ್ನು ಸಮರ್ಥಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸುವ ಅಗತ್ಯವೇನು ಎಂದು ಪೊಲೀಸರೇ ಪ್ರಶ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದಿನಗಳು, ತಿಂಗಳುಗಳು, ವರ್ಷಗಳಾದರೂ ಹೋರಾಟ ಮುಂದುವರಿಕೆ
ಇದು ಸಂಯಮ ಮತ್ತು ದೃಢತೆಯ ಹೋರಾಟ ಎಂದು ಬಣ್ಣಿಸಿರುವ ರಾಹುಲ್ ಗಾಂಧಿ, ತಮ್ಮ ಹೋರಾಟಕ್ಕೆ ದಿನಗಳು, ವಾರಗಳು, ತಿಂಗಳುಗಳು ಅಥವಾ ವರ್ಷಗಳೇ ಬೇಕಾದರೂ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಚುನಾವಣಾ ಆಯೋಗದ ವಿಚಾರದಲ್ಲಿ ತಮ್ಮ ಪಕ್ಷದ ನಿಲುವನ್ನು ಮುಂದುವರಿಸುವುದಾಗಿ ತಿಳಿಸಿರುವ ಅವರು, ಈ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ.
ಕೇಂದ್ರ ಸರ್ಕಾರದ 200 ಹಿರಿಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ: ರಾಹುಲ್
ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೂ ರಾಹುಲ್ ಗಾಂಧಿ ನೇರ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದೊಳಗಿನ ಸುಮಾರು 200 ಹಿರಿಯ ಅಧಿಕಾರಿಗಳು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.
ಈ ಅಧಿಕಾರಿಗಳು ನಿರಂತರವಾಗಿ ಅಗತ್ಯ ಮಾಹಿತಿಯನ್ನು ತಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.