ಬೆಂಗಳೂರು: ರಾಜ್ಯದಲ್ಲಿ ಪ್ಯಾಕೇಜ್ಡ್ ಕುಡಿಯುವ ನೀರಿನ ಉತ್ಪಾದನೆ ಮತ್ತು ಮಾರಾಟ ಘಟಕಗಳ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಆಹಾರ ಸುರಕ್ಷತಾ ನಿಯಮಗಳು ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಮಾನದಂಡಗಳನ್ನು ಪಾಲಿಸದ ಘಟಕಗಳ ಮೇಲೆ ನಿಗಾ ಇರಿಸಲಾಗಿದ್ದು, ಒಟ್ಟು 102 ಘಟಕಗಳಿಗೆ ಅನುಮತಿ ನಿರಾಕರಿಸಲಾಗಿದೆ.
ರಾಜ್ಯದಲ್ಲಿರುವ ಪ್ಯಾಕೇಜ್ಡ್ ಕುಡಿಯುವ ನೀರಿನ ಉತ್ಪಾದನಾ ಘಟಕಗಳ ಪರಿಶೀಲನೆ ನಡೆಸಿದ ಬಳಿಕ ಇಲಾಖೆ ಈ ಕ್ರಮ ಕೈಗೊಂಡಿದೆ. ಪರಿಶೀಲನೆ ವೇಳೆ ನಿಯಮಾನುಸಾರ ಕಾರ್ಯನಿರ್ವಹಿಸುತ್ತಿರುವ ಘಟಕಗಳಿಗೆ ಅನುಮತಿ ನೀಡಲಾಗಿದ್ದು, ಕೆಲವು ಘಟಕಗಳ ಪರವಾನಗಿ ನವೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ.
57 ಘಟಕಗಳ ಲೈಸೆನ್ಸ್ ನವೀಕರಣಕ್ಕೆ ಅನುಮತಿ:

ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆಯ ಬಳಿಕ 12 ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳಿಗೆ ಹೊಸದಾಗಿ ಅನುಮತಿ ನೀಡಲಾಗಿದೆ. ಇದರ ಜೊತೆಗೆ 57 ಘಟಕಗಳ ಪರವಾನಗಿ ನವೀಕರಣಕ್ಕೂ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆದರೆ, ನಿಯಮ ಉಲ್ಲಂಘಿಸಿರುವ 37 ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.
FSSAI ಮಾನದಂಡ ಪಾಲಿಸದ ಘಟಕಗಳ ಮೇಲೆ ನಿಗಾ:
ಅಕ್ಟೋಬರ್ 29 ಮತ್ತು 30ರಂದು ಅಧಿಕಾರಿಗಳು ಪರಿಶೀಲನೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ವೇಳೆ ಕುಡಿಯುವ ನೀರಿನ ಗುಣಮಟ್ಟ, ಉತ್ಪಾದನಾ ಪ್ರಕ್ರಿಯೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಗಿದೆ.
ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪಾಲಿಸದೆ ನಿಯಮ ಉಲ್ಲಂಘಿಸುವ ಘಟಕಗಳ ವಿರುದ್ಧ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ.