ಉಡುಪಿ: ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಉಡುಪಿಗೆ ಆಗಮಿಸಿದ್ದಾನೆ. ಹೃದಯಾಘಾತದಿಂದ ನಿಧನರಾದ ತಾಯಿ ಸುಶೀಲಾ ಪೂಜಾರ್ತಿ ಅವರ ಅಂತ್ಯಸಂಸ್ಕಾರ ಇಂದು ಮಲ್ಪೆಯ ನೆರ್ಗಿಯ ಹಿರಿಯ ಮನೆಯಲ್ಲಿ ನಡೆಯಲಿದೆ.
ನ್ಯಾಯಾಲಯದ ವಿಶೇಷ ಅನುಮತಿ ಮೇರೆಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ರವಿ ಪೂಜಾರಿಯನ್ನು ಬೆಂಗಳೂರಿನಿಂದ ಉಡುಪಿಗೆ ಕರೆತರಲಾಗಿದೆ. ಅಂತ್ಯಕ್ರಿಯೆಯ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಮತ್ತೆ ಬೆಂಗಳೂರಿಗೆ ಕರೆದೊಯ್ಯುವಂತೆ ನ್ಯಾಯಾಲಯ ಸೂಚನೆ ನೀಡಿದೆ.
86ನೇ ವಯಸ್ಸಿನಲ್ಲಿ ತಾಯಿ ನಿಧನ
ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ ಅವರು ಮೊನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಐವರು ಮಕ್ಕಳ ಪೈಕಿ ಇಬ್ಬರು ಹೆಣ್ಣುಮಕ್ಕಳು ಹಾಗೂ ಮೂವರು ಗಂಡುಮಕ್ಕಳಿದ್ದು, ರವಿ ಪೂಜಾರಿ ಕೂಡ ಒಬ್ಬ ಮಗನಾಗಿದ್ದಾನೆ.

ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನ್ಯಾಯಾಲಯದಿಂದ ಅನುಮತಿ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಉಡುಪಿಗೆ ಕರೆತಂದಿದ್ದಾರೆ. ಬೆಂಗಳೂರಿನ ಸಿಟಿ ಆರ್ಮ್ಡ್ ರಿಸರ್ವ್ ಪೊಲೀಸರಿಗೆ ಈ ಸಂಬಂಧ ನ್ಯಾಯಾಲಯ ನಿರ್ದೇಶನ ನೀಡಿತ್ತು.
ಬಿಗಿ ಪೊಲೀಸ್ ಭದ್ರತೆ
ರವಿ ಪೂಜಾರಿಯನ್ನು ಕರೆತರುವ ವೇಳೆ ಜೈಲು ಇಲಾಖೆಯಿಂದ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯೂ ಸ್ಥಳೀಯವಾಗಿ ಭದ್ರತಾ ವ್ಯವಸ್ಥೆ ಮಾಡಿದೆ. ಅಂತ್ಯಕ್ರಿಯೆಯ ವಿಧಿವಿಧಾನಗಳು ಮುಗಿದ ತಕ್ಷಣ ಆತನನ್ನು ಮತ್ತೆ ಬೆಂಗಳೂರಿಗೆ ಕರೆದೊಯ್ಯುವಂತೆ ನ್ಯಾಯಾಲಯ ಆದೇಶಿಸಿದೆ.
ಇದಲ್ಲದೆ, ಪೊಲೀಸ್ ಎಸ್ಕಾರ್ಟ್ ಭದ್ರತೆಗೆ ತಗಲುವ ಸಂಪೂರ್ಣ ವೆಚ್ಚವನ್ನೂ ರವಿ ಪೂಜಾರಿಯೇ ಭರಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಸಕ್ರಿಯವಾಗಿದ್ದ ರವಿ ಪೂಜಾರಿ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ಹಫ್ತಾ ವಸೂಲಿ ಹಾಗೂ ಜೀವ ಬೆದರಿಕೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಕರ್ನಾಟಕದಲ್ಲೇ 90ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
2019ರ ಜನವರಿ 19ರಂದು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನ್ಯಾಯಾಲಯದ ಅನುಮತಿಯೊಂದಿಗೆ ಸ್ವಗ್ರಾಮಕ್ಕೆ ಆಗಮಿಸಿದ್ದಾನೆ.