ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡದಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹಿರಿಯ ವಕೀಲರು ಲಭ್ಯವಿಲ್ಲ ಎಂಬ ಕಾರಣ ನೀಡಿ ವಿಚಾರಣೆಯನ್ನು ಮುಂದೂಡುವಂತೆ ತಮಿಳುನಾಡು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದಕ್ಕೆ ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸುವ ಸಂದರ್ಭದಲ್ಲಿ ತಮಿಳುನಾಡು ಸರ್ಕಾರದ ವಕೀಲರನ್ನು ಪ್ರಶ್ನಿಸಿದೆ. ಹಿರಿಯ ವಕೀಲರು ಲಭ್ಯವಿಲ್ಲ ಎಂಬ ಕಾರಣ ನೀಡಿ ಈ ಹಿಂದಿನ ವಿಚಾರಣೆಯಲ್ಲೂ ಮುಂದೂಡಿಕೆ ಕೋರಲಾಗಿತ್ತು. ಇದೀಗ ಮತ್ತೆ ಅದೇ ಕಾರಣ ಮುಂದಿಟ್ಟುಕೊಂಡು ವಿಚಾರಣೆ ಮುಂದೂಡುವಂತೆ ಮನವಿ ಮಾಡಿರುವುದಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ಪದೇಪದೇ ಮುಂದೂಡಿಕೆ ಕೋರಿದ್ದಕ್ಕೆ ನ್ಯಾಯಪೀಠ ಆಕ್ಷೇಪ
ಪ್ರಕರಣಗಳ ವಿಚಾರಣೆಯನ್ನು ಪದೇಪದೇ ಮುಂದೂಡುವಂತೆ ಮನವಿ ಮಾಡುವುದು ನ್ಯಾಯಾಲಯದಲ್ಲಿ ಈಗಾಗಲೇ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಕಾರಣವಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಮಿಳುನಾಡು ಸರ್ಕಾರದ ಮುಂದೂಡಿಕೆ ಮನವಿಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದೆ.
ಕಾವೇರಿ ನೀರಿನ ವಿಚಾರದಲ್ಲೂ ತಮಿಳುನಾಡಿಗೆ ಹಿನ್ನಡೆ
ಇನ್ನು ಸುಪ್ರೀಂ ಕೋರ್ಟ್‌ನ ಇತ್ತೀಚಿನ ಬೆಳವಣಿಗೆಗಳಿಂದ ತಮಿಳುನಾಡು ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾದಂತಾಗಿದೆ. ಕಳೆದ ವಾರ ಬಾಕಿ ಕಾವೇರಿ ನೀರು ಬಿಡುಗಡೆ ವಿಚಾರದಲ್ಲೂ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳಿಗೆ ಸುಪ್ರೀಂ ಕೋರ್ಟ್‌ನಿಂದ ಹಿನ್ನಡೆಯಾಗಿತ್ತು.
ಕರ್ನಾಟಕದಿಂದ ಬಾಕಿ ಇರುವ 11 ಟಿಎಂಸಿ ಹೆಚ್ಚುವರಿ ಕಾವೇರಿ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಎರಡು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿತ್ತು. ಆದರೆ, ಈ ಎರಡೂ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.
ಈ ಮೂಲಕ ಮೇಕೆದಾಟು ಅಣೆಕಟ್ಟು ಯೋಜನೆ ಹಾಗೂ ಕಾವೇರಿ ನೀರು ಹಂಚಿಕೆ ವಿಚಾರಗಳಲ್ಲಿ ತಮಿಳುನಾಡು ಸರ್ಕಾರದ ಅರ್ಜಿಗಳಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.