ಬೆಂಗಳೂರು: ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ನಿರ್ಧಾರ ಕೈಗೊಂಡು, ಅವರ ಗೌರವಧನ ಹೆಚ್ಚಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಆಶಾ ಕಾರ್ಯಕರ್ತೆಯರನ್ನು ದೆಹಲಿಗೆ ಕರೆಸಿಕೊಂಡು ಕೇಂದ್ರದ ಶಿಕ್ಷಣ ಸಚಿವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರನ್ನು ಭೇಟಿ ಮಾಡಿಸಿದ್ದಾಗಿ ತಿಳಿಸಿದರು. ಆದರೆ, ತಮ್ಮ ಅಧಿಕಾರಕ್ಕೂ ಕೆಲವು ಮಿತಿಗಳಿವೆ ಎಂದ ಅವರು, ರಾಜ್ಯ ಸರ್ಕಾರವೇ ಈ ವಿಚಾರದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವಧನದ ಬಗ್ಗೆ ತಮಗೆ ತಿಳಿದಿದೆ. ಅವರ ಬೇಡಿಕೆ ನ್ಯಾಯಯುತವಾಗಿದ್ದು, ಯಾವುದೇ ಸ್ವಾರ್ಥಕ್ಕಾಗಿ ಅವರು ಹೋರಾಟ ನಡೆಸುತ್ತಿಲ್ಲ. ಇಂದಿನ ಪರಿಸ್ಥಿತಿಯಲ್ಲಿ ಕೇವಲ 8 ಸಾವಿರ ರೂಪಾಯಿಗಳಲ್ಲಿ ಜೀವನ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಚಳಿಯನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಸರ್ಕಾರಕ್ಕೆ ಅಲ್ಪಸ್ವಲ್ಪ ಮಾನವೀಯತೆ ಇದ್ದರೂ ಅವರ ಸಂಕಷ್ಟವನ್ನು ಅರ್ಥಮಾಡಿಕೊಳ್ಳಬೇಕು. ವಿವಿಧ ವಿಚಾರಗಳಿಗೆ ಹಣ ಖರ್ಚು ಮಾಡುವ ಸರ್ಕಾರ, ಹಗಲಿರುಳು ಜನರಿಗಾಗಿ ದುಡಿಯುವ ಈ ಮಹಿಳೆಯರಿಗೆ ಗೌರವ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಕರ್ತವ್ಯ ಎಂದು ಹೇಳಿದರು.

ರಾಜ್ಯ ಸರ್ಕಾರ ವಿವಿಧ ಕಾರ್ಯಕ್ರಮಗಳಿಗೆ ಮತ್ತು ರಾಜಕೀಯ ಚಟುವಟಿಕೆಗಳಿಗೆ ಹಣ ವ್ಯಯಿಸುವ ಬದಲು, ಜನರ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರ ಕಲ್ಯಾಣಕ್ಕೆ ಆದ್ಯತೆ ನೀಡಬೇಕು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಅವರಿಗೆ ಸೂಕ್ತ ಗೌರವ ಮತ್ತು ಸೌಲಭ್ಯ ಕಲ್ಪಿಸಿದರೆ, ಅವರ ಸೇವೆಗೆ ಇನ್ನಷ್ಟು ಪ್ರೋತ್ಸಾಹ ದೊರೆಯಲಿದೆ ಎಂದರು.
ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರಿಸುತ್ತಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಹೊಣೆ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಸರ್ಕಾರ ಇರುವುದು ಏಕೆ? ಆಶಾ ಕಾರ್ಯಕರ್ತೆಯರು ನಮ್ಮ ರಾಜ್ಯದ ಜನರಿಗೆ, ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಿರುವಾಗ ಅವರ ಗೌರವಧನ ಹೆಚ್ಚಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರಿಗೆ ನೆರವು ನೀಡುವ ವಿಶ್ವಾಸವಿದೆ ಎಂದು ತಿಳಿಸಿದ ಅವರು, ಪ್ರಸ್ತುತ ಸರ್ಕಾರವೇ ತಡಮಾಡದೆ ಅವರ ಬೇಡಿಕೆಗಳ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.