ಅಕ್ಷರ ಗಾತ್ರ

ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್, 2 ವಾರಗಳಲ್ಲಿ ನ್ಯಾಯಾಲಯಕ್ಕೆ ಶರಣಾಗುವಂತೆ ಆದೇಶ

Supreme Court ಕಟ್ಟಡದ ಪಕ್ಕದಲ್ಲಿ ಕಾಂಗ್ರೆಸ್ ಶಾಸಕ Vinay Kulkarni ಅವರ ಭಾವಚಿತ್ರ.

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿಯಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಶಿಕ್ಷೆಗೆ ತಡೆ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. 2023ರ ಚುನಾವಣೆಯಲ್ಲಿ ಗೆದ್ದ ಬಳಿಕ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿದ್ದ ವಿನಯ್ ಕುಲಕರ್ಣಿ ಹಲವು ಸಂದರ್ಭಗಳಲ್ಲಿ ಜೈಲಿನಲ್ಲಿದ್ದರು. ಜಾಮೀನು ಹಾಗೂ ಪೆರೋಲ್ ಮೂಲಕ ಎರಡು ಬಾರಿ ಜೈಲಿನಿಂದ ಹೊರಬಂದಿದ್ದ ಅವರು, ಇದೀಗ ಸುಪ್ರೀಂ ಕೋರ್ಟ್ ಆದೇಶದಿಂದ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಿಸಿದ್ದಾರೆ.

ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿತ್ತು

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು.

ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜುಲೈ 31ರಂದು ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಅಪರಾಧ ನಿರ್ಣಯ ಹಾಗೂ ಶಿಕ್ಷೆಗೆ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಕ್ಟೋಬರ್ 27ರಂದು ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಅಂತಿಮ ಆದೇಶ ಪ್ರಕಟಿಸಿರುವ ನ್ಯಾಯಾಲಯ, ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಶಿಕ್ಷೆಗೆ ತಡೆಯಾಜ್ಞೆಯನ್ನು ರದ್ದುಪಡಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ತನಿಖೆ ನಡೆಸಿದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚು ನಡೆದಿರುವ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಏಪ್ರಿಲ್‌ನಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿರುವುದರಿಂದ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವಂತಾಗಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.