ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಭಾರೀ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಹಸ್ಯವಾಗಿ ಭೇಟಿಯಾಗುವ ಅಗತ್ಯ ನಮಗಿಲ್ಲ. ಅವರು ನಮ್ಮ ನಾಯಕರು, ಯಾವಾಗ ಬೇಕಾದರೂ ಭೇಟಿಯಾಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ಅವರು ಸಿದ್ದರಾಮಯ್ಯ ಅವರನ್ನು ಮೂರು ಬಾರಿ ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ನಾವು ಅವರನ್ನು ಕಡಿಮೆ ಪ್ರಮಾಣದಲ್ಲೇ ಭೇಟಿಯಾಗುತ್ತಿದ್ದೆವು. ಹೀಗಾಗಿ ಈ ಭೇಟಿಗಳಲ್ಲಿ ಯಾವುದೇ ರಹಸ್ಯವಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೂ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಸಂದರ್ಭದಲ್ಲಿ ಸ್ಟಿಂಗ್ ಆಪರೇಷನ್ ನಡೆಯಬಹುದು. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ. ಕೆಲವರು ಬೇರೆ ಬೇರೆ ವೇಷಗಳಲ್ಲಿ ಬಂದು ಆಕರ್ಷಿಸುವ ಮೂಲಕ ಬಲೆಗೆ ಬೀಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಮತ್ತೊಂದೆಡೆ, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದಲೇ ಸ್ಟಿಂಗ್ ಆಪರೇಷನ್ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಸ್ಟಿಂಗ್ ಆಪರೇಷನ್ ನಡೆಯುವ ಸಾಧ್ಯತೆಯಿದೆ, ಎಚ್ಚರಿಕೆಯಿಂದ ಇರಿ ಎಂಬ ಸೂಚನೆಯಷ್ಟೇ ಮುಖ್ಯಮಂತ್ರಿಗಳಿಂದ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಷ್ಟೇ ಅಲ್ಲ, ವೈಯಕ್ತಿಕವಾಗಿ ತಮಗೆ ಈವರೆಗೆ ಯಾವುದೇ ಸ್ಟಿಂಗ್ ಆಪರೇಷನ್ ಅನುಭವವಾಗಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಒಟ್ಟಿನಲ್ಲಿ ಸಿದ್ದರಾಮಯ್ಯ ಅವರೊಂದಿಗಿನ ಭೇಟಿಗಳ ಬಗ್ಗೆ ಎದ್ದಿರುವ ಅನುಮಾನಗಳಿಗೆ ತೆರೆ ಎಳೆಯಲು ಪ್ರಯತ್ನಿಸಿರುವ ಸತೀಶ್ ಜಾರಕಿಹೊಳಿ, ಸ್ಟಿಂಗ್ ಆಪರೇಷನ್ ಬಗ್ಗೆ ಮುಖ್ಯಮಂತ್ರಿಗಳಿಂದ ಎಚ್ಚರಿಕೆ ಬಂದಿರುವುದನ್ನು ಬಹಿರಂಗಪಡಿಸಿದ್ದಾರೆ.