ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಬಳಿಗೂ ಕೆಲವರು ಜಿಎಸ್‌ಟಿ ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸುವ ನೆಪದಲ್ಲಿ ಬಂದಿದ್ದರು. ತಮ್ಮಿಂದಲೇ ಸ್ಟಿಂಗ್ ಆಪರೇಷನ್ ಆರಂಭಿಸಲು ಪ್ರಯತ್ನಿಸಲಾಗಿತ್ತು ಎಂದು ಹೇಳಿದ್ದಾರೆ.
ಆದರೆ, ಅವರ ನಡೆ ಬಗ್ಗೆ ಮೊದಲೇ ಅನುಮಾನ ಬಂದಿದ್ದರಿಂದ ಪೊಲೀಸರ ಮೂಲಕ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧದ ಎಲ್ಲಾ ದಾಖಲೆಗಳು ಹಾಗೂ ಫೋಟೋಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿರುವುದಾಗಿ ಹೇಳಿರುವ ಅವರು, ಅಗತ್ಯಬಿದ್ದರೆ ಫೋಟೋಗಳನ್ನು ಬಿಡುಗಡೆ ಮಾಡುವುದಾಗಿಯೂ ತಿಳಿಸಿದ್ದಾರೆ.
ಈ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ, ಯಾರು ಹಣಕಾಸು ಒದಗಿಸುತ್ತಿದ್ದಾರೆ ಹಾಗೂ ಇದರ ಪಿತಾಮಹ ಯಾರು ಎಂಬುದು ತಮಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ‘ಕುಂಬಳಕಾಯಿ ಕಳ್ಳ ಅಂದರೆ ಕೆಲವರು ಹೆಗಲು ಮುಟ್ಟಿಕೊಳ್ಳುತ್ತಿದ್ದಾರೆ’ ಎಂದು ಅವರು ಪರೋಕ್ಷವಾಗಿ ಕೆಲವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ 2000ರ ಆಸುಪಾಸಿನಲ್ಲೂ ತಮ್ಮ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿದ್ದವು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುಖಾಸುಮ್ಮನೆ ಟ್ರ್ಯಾಪ್ ಮಾಡಲು ಕೆಲವರು ಬರುತ್ತಾರೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಹಾಗೂ ಸಚಿವರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಇನ್ನು ಈ ಷಡ್ಯಂತ್ರದ ಹಿಂದೆ ಕರ್ನಾಟಕದವರೇ ಇದ್ದಾರೆಯೇ ಅಥವಾ ಹೊರರಾಜ್ಯದವರ ಕೈವಾಡವಿದೆಯೇ ಎಂಬುದನ್ನು ಸದ್ಯಕ್ಕೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.