ಆನೇಕಲ್: ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಮುತ್ಯಾಲಮಡುವಿನ ಬಳಿ ಕಾರಿನಲ್ಲಿ 7 ಆನೆದಂತಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಿಂದ ಬೆಂಗಳೂರಿಗೆ ದಂತಗಳನ್ನು ಮಾರಾಟ ಮಾಡಲು ತರುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತರನ್ನು ತಮಿಳುನಾಡು ಮೂಲದ ಸತೀಶ್ವರನ್, ಶರತ್ ಕುಮಾರ್ ಹಾಗೂ ಶಂಕರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 7 ಆನೆದಂತಗಳು, ಒಂದು ಕಾರು, ಮೊಬೈಲ್ ಫೋನ್ ಹಾಗೂ ವನ್ಯಜೀವಿಗಳ ಬೇಟೆಗೆ ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವನ್ಯಜೀವಿಗಳ ಬೇಟೆ, ಆನೆದಂತಗಳ ಸಾಗಣೆ ಹಾಗೂ ಜಿಂಕೆ ಮಾಂಸ ಸಾಗಾಟದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಪೊಲೀಸರು ಆರೋಪಿಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು.
ಆನೇಕಲ್ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಮಿಳುನಾಡಿನಿಂದ ಕಾರಿನಲ್ಲಿ ಆನೆದಂತಗಳನ್ನು ಬೆಂಗಳೂರಿಗೆ ಮಾರಾಟ ಮಾಡಲು ತರುತ್ತಿದ್ದ ವೇಳೆ ಮುತ್ಯಾಲಮಡುವಿನ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆಗಾಗಿ ನ್ಯಾಯಾಲಯವು ಆರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.