ಅಕ್ಷರ ಗಾತ್ರ

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ; ಭಕ್ತಸಾಗರ ನಿರೀಕ್ಷೆ, ನಾಳೆ ಗರ್ಭಗುಡಿ ಬಾಗಿಲು ಬಂದ್!

ಹಾಸನಾಂಬೆ ದೇವಾಲಯದ ಪ್ರವೇಶದ್ವಾರ ಮತ್ತು ದರ್ಶನಕ್ಕಾಗಿ ನೆರೆದಿರುವ ಅಪಾರ ಭಕ್ತರ ಸರತಿ ಸಾಲು.

ಹಾಸನ: ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂದು ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುವ ಸಾಧ್ಯತೆಯಿದ್ದು, ದರ್ಶನಕ್ಕೆ ಜಿಲ್ಲಾಡಳಿತ ವಿಶೇಷ ವ್ಯವಸ್ಥೆ ಮಾಡಿದೆ.

ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವ ಭಕ್ತರ ಸಂಖ್ಯೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಕಳೆದ ದಿನಗಳಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದಿದ್ದು, ವಿಶೇಷ ದರ್ಶನದ ಟಿಕೆಟ್ ಹಾಗೂ ಲಡ್ಡು ಪ್ರಸಾದದ ಮಾರಾಟದಿಂದ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಆದಾಯ ಸಂಗ್ರಹವಾಗಿದೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಿರಂತರ 11 ಗಂಟೆಗಳ ಕಾಲ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ಈ ಅವಧಿಯಲ್ಲಿ ಭಕ್ತರು ಸರತಿ ಸಾಲಿನಲ್ಲೇ ಕಾಯಬೇಕಾಗುತ್ತದೆ.

ಬಳಿಕ ಮಧ್ಯರಾತ್ರಿ 1 ಗಂಟೆಯಿಂದ ಬುಧವಾರ ಬೆಳಿಗ್ಗೆ 7 ಗಂಟೆಯವರೆಗೆ ಮತ್ತೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ. ಬುಧವಾರ ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಗೋಲ್ಡ್ ಪಾಸ್ ಹೊಂದಿರುವವರಿಗೆ ಹಾಗೂ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ವಿವಿಧ ಕ್ಷೇತ್ರಗಳ ಗಣ್ಯರಿಗೆ ಪ್ರೋಟೋಕಾಲ್ ಅನ್ವಯ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಈ ಸಮಯದಲ್ಲಿ ಧರ್ಮದರ್ಶನ ಹಾಗೂ 1,000 ಮತ್ತು 300 ರೂಪಾಯಿ ವಿಶೇಷ ದರ್ಶನದ ಸರತಿ ಸಾಲಿನಲ್ಲಿರುವ ಭಕ್ತರಿಗೆ ದರ್ಶನ ವಿಳಂಬವಾಗುವ ಸಾಧ್ಯತೆಯಿದೆ.

ಭಕ್ತರಿಗೆ ಸಚಿವರು, ಜಿಲ್ಲಾಧಿಕಾರಿ ಮನವಿ:

ಕೊನೆಯ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಭಕ್ತರಿಗೆ ಮನವಿ ಮಾಡಿದ್ದಾರೆ. ದರ್ಶನಕ್ಕೆ 10ರಿಂದ 12 ಗಂಟೆಗಳವರೆಗೆ ಕಾಯಬೇಕಾಗುವ ಸಾಧ್ಯತೆಯಿದ್ದು, ಭಕ್ತರು ಮಾನಸಿಕವಾಗಿ ಸಿದ್ಧರಾಗಿ ಆಗಮಿಸುವಂತೆ ತಿಳಿಸಿದ್ದಾರೆ.

ಇನ್ನು ದರ್ಶನದ ಕೊನೆಯ ದಿನ ಯಾವುದೇ ಗೊಂದಲ ಅಥವಾ ನೂಕುನುಗ್ಗಲು ಉಂಟಾಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಮತ್ತು ವ್ಯವಸ್ಥೆಗಳನ್ನು ಕೈಗೊಂಡಿದೆ.

ಬುಧವಾರ ಮಧ್ಯಾಹ್ನ ವಿಶ್ವರೂಪ ದರ್ಶನದ ಬಳಿಕ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಗುತ್ತದೆ. ಇದರೊಂದಿಗೆ ಈ ವರ್ಷದ ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ತೆರೆ ಬೀಳಲಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.