ಕಾರವಾರ: ಮೀನುಗಾರಿಕೆಗೆ ತೆರಳಿ ಬಂದರಿಗೆ ಮರಳಿದ್ದ ಮೀನುಗಾರರಿಗೆ ವಿಧಿಯಾಟವೇ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ತದಡಿ ಬಂದರಿನಲ್ಲಿ ಬೋಟ್‌ನೊಳಗೆ ಉಸಿರುಗಟ್ಟಿ ಮೂವರು ಮೀನುಗಾರರು ಮೃತಪಟ್ಟಿದ್ದಾರೆ.
ನೌಶಾದ್ (48), ಅಮೀನ್ (40) ಹಾಗೂ ಅಮನ್ (26) ದುರಂತದಲ್ಲಿ ಪ್ರಾಣ ಕಳೆದುಕೊಂಡವರು. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಅಬ್ದುಲ್ ಯಾಕುಬ್ ದಾಡಿಯಾ (60) ಅಸ್ವಸ್ಥಗೊಂಡಿದ್ದಾರೆ. ಅವರನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಿಸಲಾದ ಮತ್ತೊಬ್ಬ ಮೀನುಗಾರನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ತದಡಿಯ ಕುಚೈಮಾ ಬೋಟ್‌ನಲ್ಲಿ ಮೀನುಗಾರರು ಕೆಲಸ ಮಾಡುತ್ತಿದ್ದರು. ಚಮನ್ ಮೀನು ಹಿಡಿದು ಬಂದರಿಗೆ ಬಂದ ಬಳಿಕ ಬೋಟ್‌ನಲ್ಲಿದ್ದ ಮೀನುಗಳನ್ನು ಖಾಲಿ ಮಾಡಿದ್ದರು. ನಂತರ ಮೀನು ಸಂಗ್ರಹಿಸಿದ್ದ ಸ್ಥಳವನ್ನು ಸ್ವಚ್ಛಗೊಳಿಸಲು ಇಳಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಮೀನಿನ ವಾಸನೆ ಅಥವಾ ವಿಷಕಾರಿ ಅನಿಲದಿಂದ ಉಸಿರುಗಟ್ಟಿ ಮೀನುಗಾರರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ತದಡಿ ಬಂದರು ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
