ಅಕ್ಷರ ಗಾತ್ರ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಪ್ರದೋಷ್ ಹೇಳಿಕೆ ಬೆನ್ನಲ್ಲೇ ಎಸಿಪಿ ಚಂದನ್, PSI ವಿನಯ್ʼಗೆ ಸಂಕಷ್ಟ!

Darshan case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ Darshan, Pavithra Gowda ಮತ್ತು ಪೊಲೀಸ್ ಅಧಿಕಾರಿಗಳ ಕೊಲಾಜ್ ಚಿತ್ರ.

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ, ಪಿಎಸ್‌ಐ ವಿನಯ್ ಅವರ ವಿರುದ್ಧವೂ ಗಂಭೀರ ಆರೋಪಗಳು ಕೇಳಿಬಂದಿದ್ದು, ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ಪ್ರಕರಣದ ತನಿಖೆಯಲ್ಲಿ ಲೋಪಗಳಾಗಿವೆ ಹಾಗೂ ಕೆಲವು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೆ, ಪ್ರಕರಣದಲ್ಲಿ ಪಿಎಸ್‌ಐ ವಿನಯ್ ಅವರ ಪಾತ್ರದ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಪೊಲೀಸ್ ಅಧಿಕಾರಿಗಳ ಪಾತ್ರದ ಕುರಿತು ಪ್ರಶ್ನೆಗಳನ್ನು ಎತ್ತಿರುವ ಸ್ನೇಹಮಯಿ ಕೃಷ್ಣ ಅವರು, ಈ ಸಂಬಂಧ ಡಿಜಿ ಮತ್ತು ಐಜಿಪಿ ಡಾ. ಎಂ. ಸಲೀಂ ಅವರಿಗೆ ದೂರು ಸಲ್ಲಿಸಿದ್ದರು.

ದೂರಿನಲ್ಲಿ ತನಿಖೆಯಲ್ಲಿನ ಲೋಪಗಳು ಹಾಗೂ ಪೊಲೀಸ್ ಅಧಿಕಾರಿಗಳ ಪಾತ್ರದ ಕುರಿತು ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮತ್ತು ಪಿಎಸ್‌ಐ ವಿನಯ್ ಅವರ ವಿರುದ್ಧ ಇಲಾಖಾ ತನಿಖೆ ನಡೆಸಲು ಸೂಚಿಸಲಾಗಿದೆ. ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ತನಿಖೆ ನಡೆಯುವ ಸಾಧ್ಯತೆ ಇದೆ.

ಇನ್ನು, ಪಿಎಸ್‌ಐ ವಿನಯ್ ಅವರ ಸೂಚನೆಯ ಮೇರೆಗೆ ರೇಣುಕಾಸ್ವಾಮಿ ಅವರ ಮೃತದೇಹವನ್ನು ಆರೋಪಿಗಳು ಎಸೆದಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಈ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ವಿನಯ್ ಅವರ ಪಾತ್ರದ ಕುರಿತು ಮತ್ತಷ್ಟು ತನಿಖೆ ನಡೆಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ.

ಈ ಬೆಳವಣಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಹೊಸ ಆಯಾಮ ನೀಡಿದೆ. ಈಗಾಗಲೇ ಹಲವು ತಿರುವುಗಳನ್ನು ಕಂಡಿರುವ ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಪಾತ್ರದ ಕುರಿತು ಕೇಳಿಬಂದಿರುವ ಆರೋಪಗಳು ಮಹತ್ವ ಪಡೆದುಕೊಂಡಿವೆ. ಇಲಾಖಾ ತನಿಖೆಯಲ್ಲಿ ಯಾವ ಅಂಶಗಳು ಹೊರಬರಲಿವೆ? ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಯಾವ ಸ್ಪಷ್ಟನೆ ಸಿಗಲಿದೆ? ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮನರಂಜನಾ ವರದಿಗಾರರು (Entertainment & Cinema Reporter)

NTV ಕನ್ನಡ ಸಂಪಾದಕೀಯ ತಂಡ.