ಅಕ್ಷರ ಗಾತ್ರ

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಮಾಸಿಕ ಗೌರವಧನ 2,000 ರೂ. ಹೆಚ್ಚಳಕ್ಕೆ ಸರ್ಕಾರದ ಲಿಖಿತ ಟಿಪ್ಪಣಿ

Bengaluru Freedom Park ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ಆರೋಗ್ಯ ಇಲಾಖೆಯ ನಿರ್ಧಾರ

ಬೆಂಗಳೂರು: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ 13 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಲಿಖಿತ ಟಿಪ್ಪಣಿ ಹೊರಡಿಸಿದೆ.

ಮೌಖಿಕ ಭರವಸೆಗೆ ಒಪ್ಪದ ಆಶಾ ಕಾರ್ಯಕರ್ತೆಯರು, ಗೌರವಧನ ಹೆಚ್ಚಳದ ಕುರಿತು ಲಿಖಿತ ಆದೇಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ಇಂದು ಅಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ.

ನವೆಂಬರ್ 28ರಂದು ಮುಖ್ಯಮಂತ್ರಿ ಅವರು ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳು ಹಾಗೂ ಮನವಿಗಳನ್ನು ಆಲಿಸಿದ್ದರು. ಈ ವೇಳೆ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿತ್ತು.

ಇದೀಗ ಗೌರವಧನ ಹೆಚ್ಚಳದ ಜಾರಿಗೆ ಸಂಬಂಧಿಸಿದಂತೆ ಕಾರ್ಯಕರ್ತೆಯರ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿರುವ ಮುಖ್ಯಮಂತ್ರಿ, 2027ರ ಜನವರಿ 1ರಿಂದಲೇ ಹೆಚ್ಚಳವನ್ನು ಜಾರಿಗೊಳಿಸಲು ಒಪ್ಪಿಗೆ ಸೂಚಿಸಿದ್ದಾರೆ.

ಜನವರಿ 1ರಿಂದ ಹೆಚ್ಚಳ ಜಾರಿಗೆ ಬರುವಂತೆ ಅಗತ್ಯ ಪ್ರಕ್ರಿಯೆಗಳನ್ನು ಆದ್ಯತೆಯ ಮೇರೆಗೆ ಆರಂಭಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳ ಕಚೇರಿ ನಿರ್ದೇಶನ ನೀಡಿದೆ. ಸರ್ಕಾರದ ಈ ನಿರ್ಧಾರದಿಂದ 13 ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರಿಗೆ ನಿರಾಳತೆ ಸಿಕ್ಕಂತಾಗಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.