ರಾಮನಗರ: ಶಿಕ್ಷಕರು ಬೈದರು ಎಂಬ ಕಾರಣಕ್ಕೆ ಮನನೊಂದ ನಾಲ್ವರು ವಿದ್ಯಾರ್ಥಿಗಳು ವಸತಿ ಶಾಲೆಯ ಹಾಸ್ಟೆಲ್‌ನಿಂದ ಪರಾರಿಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರದ ಕೆಂಪೇಗೌಡ ಸರ್ಕಲ್ ಸಮೀಪದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಇಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಬುಧವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಹಾಸ್ಟೆಲ್‌ನಿಂದ ಹೊರಹೋಗಿದ್ದಾರೆ.
ಶಿಕ್ಷಕರು ಬೈದಿದ್ದರಿಂದ ಮನನೊಂದ ವಿದ್ಯಾರ್ಥಿಗಳು ರಾತ್ರಿ ವೇಳೆ ಶಾಲೆಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಇಲ್ಲದಿರುವುದು ತಿಳಿಯುತ್ತಿದ್ದಂತೆ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಈ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲರು ರಾಮನಗರದ ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ನಾಲ್ವರು ವಿದ್ಯಾರ್ಥಿಗಳ ಪತ್ತೆಗೆ ಮುಂದಾಗಿದ್ದಾರೆ.