ಅಕ್ಷರ ಗಾತ್ರ

ಕರ್ನಾಟಕಕ್ಕೆ ಜಲಸಂಕಷ್ಟ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಶಿಫಾರಸು!

KRS ಜಲಾಶಯದಲ್ಲಿ ನೀರಿನ ಮಟ್ಟ ಕುಸಿದು ಒಣಗಿದ ದಂಡೆಗಳು ಕಾಣಿಸುತ್ತಿರುವುದು

ನವದೆಹಲಿ/ಬೆಂಗಳೂರು: ಬರದ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಆತಂಕ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ. ದೆಹಲಿಯಲ್ಲಿ ನಡೆದ ಸಭೆಯ ಬಳಿಕ ಸಮಿತಿ ಈ ಶಿಫಾರಸು ಮಾಡಿದ್ದು, ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಕಳೆದ ಅಕ್ಟೋಬರ್ 23ರಿಂದ ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದ್ದರೂ ಕರ್ನಾಟಕ ನೀರು ಹರಿಸಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಸಲ್ಲಿಸಿತ್ತು.

ಕರ್ನಾಟಕದಿಂದ ಕಾವೇರಿ ನೀರು ಹರಿಯದ ಕಾರಣ ತಮಿಳುನಾಡಿನ ಸುಮಾರು 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ತಮಿಳುನಾಡು ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ನೀರಿನ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ವಾದಿಸಿದ್ದ ತಮಿಳುನಾಡು, ಕಾವೇರಿ ವಿವಾದದ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿತ್ತು. ಈ ಮನವಿಯನ್ನು ಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠ ಭರವಸೆ ನೀಡಿತ್ತು.

ಈ ಬೆಳವಣಿಗೆಗಳ ಬೆನ್ನಲ್ಲೇ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಲಾಗಿದೆ. ಸಭೆಯ ಬಳಿಕ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸಮಿತಿ ಶಿಫಾರಸು ಮಾಡಿದೆ.

ಇತ್ತ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿಯೂ ನೀರಿನ ಪರಿಸ್ಥಿತಿ ಆತಂಕ ಮೂಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ ನವೆಂಬರ್ ಆರಂಭದಲ್ಲೇ 99 ಅಡಿಗೆ ಕುಸಿದಿದೆ. ಬೇಸಿಗೆ ಆರಂಭವಾಗುವ ಮೊದಲೇ ಜಲಾಶಯದ ನೀರಿನ ಮಟ್ಟ ಇಳಿಕೆಯಾಗುತ್ತಿರುವುದು ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಹುದೆಂಬ ಆತಂಕಕ್ಕೆ ಕಾರಣವಾಗಿದೆ.

ಒಂದೆಡೆ ರಾಜ್ಯದ ನೀರಿನ ಅಗತ್ಯಗಳನ್ನು ಪೂರೈಸುವ ಸವಾಲು ಎದುರಾಗಿದ್ದರೆ, ಮತ್ತೊಂದೆಡೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಕರ್ನಾಟಕದ ಮೇಲೆ ಒತ್ತಡ ಹೆಚ್ಚಾಗಿದೆ. ಸದ್ಯ ಕಾವೇರಿ ನೀರು ನಿಯಂತ್ರಣ ಸಮಿತಿ ನೀರು ಹರಿಸುವಂತೆ ಶಿಫಾರಸು ಮಾಡಿದ್ದು, ಈ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದಿನ ನಿರ್ಧಾರ ಮಹತ್ವ ಪಡೆದುಕೊಂಡಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.