ರಾಮನಗರ: ಸ್ಯಾಂಡಲ್ವುಡ್ ನಟ ಧನ್ವೀರ್ ಗೌಡ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ, ನಟ ಝೈದ್ ಖಾನ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ನಡುವಿನ ಸಂಘರ್ಷದಲ್ಲಿ ಝೈದ್ ಖಾನ್ ಹೆಸರು ಪ್ರಸ್ತಾಪವಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಧನ್ವೀರ್ ವಿರುದ್ಧ ಚನ್ನಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಝೈದ್ ಖಾನ್ ಅಭಿಮಾನಿಗಳು, ನಟನ ಭಾವಚಿತ್ರಕ್ಕೆ ಮಸಿ ಬಳಿದು ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ.
ಹೌದು, ನಟ ಧನ್ವೀರ್ ಗೌಡ ಹಾಗೂ ವಿಜಯಲಕ್ಷ್ಮಿ ನಡುವಿನ ವಿವಾದ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಈ ಸಂಘರ್ಷದಲ್ಲಿ ನಟ ಝೈದ್ ಖಾನ್ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಧನ್ವೀರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಅಭಿಮಾನಿಗಳು, ಧನ್ವೀರ್ ಕೂಡಲೇ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆ ವೇಳೆ ಧನ್ವೀರ್ ಗೌಡ ಅವರ ಭಾವಚಿತ್ರಕ್ಕೆ ಮಸಿ ಬಳಿದ ಅಭಿಮಾನಿಗಳು, ಚಪ್ಪಲಿಯಿಂದ ಹೊಡೆದು ತಮ್ಮ ಆಕ್ರೋಶ ಪ್ರದರ್ಶಿಸಿದ್ದಾರೆ. ನಟ ಝೈದ್ ಖಾನ್ ಅವರ ಹೆಸರನ್ನು ಅನಗತ್ಯವಾಗಿ ವಿವಾದಕ್ಕೆ ಎಳೆದು ತರಲಾಗುತ್ತಿದೆ ಎಂದು ಆರೋಪಿಸಿರುವ ಅಭಿಮಾನಿಗಳು, ಧನ್ವೀರ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಇನ್ನು ಧನ್ವೀರ್ ತಮ್ಮ ವೈಯಕ್ತಿಕ ಲಾಭಕ್ಕಾಗಿ ಝೈದ್ ಖಾನ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಅಭಿಮಾನಿಗಳು ಮಾಡಿದ್ದಾರೆ. ಝೈದ್ ಖಾನ್ ಬಗ್ಗೆ ಧನ್ವೀರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದುರಹಂಕಾರದಿಂದ ಹೇಳಿಕೆ ನೀಡಿರುವ ಧನ್ವೀರ್ ಕೂಡಲೇ ತಮ್ಮ ಮಾತುಗಳನ್ನು ಹಿಂಪಡೆದು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಷ್ಟೇ ಅಲ್ಲ, ಧನ್ವೀರ್ ವಿರುದ್ಧ ಝೈದ್ ಖಾನ್ ಅಭಿಮಾನಿಗಳು ಎಚ್ಚರಿಕೆಯನ್ನೂ ನೀಡಿದ್ದಾರೆ. ನಟ ಝೈದ್ ಖಾನ್ ಬಳಿ ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ, ಧನ್ವೀರ್ ರಾಜ್ಯದಲ್ಲಿ ಎಲ್ಲೇ ಹೋದರೂ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈ ಮೂಲಕ ಇಬ್ಬರು ನಟರ ಅಭಿಮಾನಿಗಳ ನಡುವೆಯೂ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.
ಇದೇ ವೇಳೆ ಪ್ರತಿಭಟನೆಗೆ ಸೀಮಿತವಾಗದೆ ಝೈದ್ ಖಾನ್ ಅಭಿಮಾನಿಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಚನ್ನಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ನಟ ಧನ್ವೀರ್ ಗೌಡ ವಿರುದ್ಧ ದೂರು ಸಲ್ಲಿಸಿದ್ದು, ಝೈದ್ ಖಾನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ವೈಯಕ್ತಿಕ ಸಂಘರ್ಷದಲ್ಲಿ ಝೈದ್ ಖಾನ್ ಹೆಸರನ್ನು ಪ್ರಸ್ತಾಪಿಸಿರುವುದೇ ಈ ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ತಮ್ಮ ನೆಚ್ಚಿನ ನಟನ ಹೆಸರನ್ನು ಅನಗತ್ಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬುದು ಅಭಿಮಾನಿಗಳ ಆರೋಪವಾಗಿದೆ. ಆದರೆ ಈ ಆರೋಪಗಳ ಕುರಿತು ಧನ್ವೀರ್ ಗೌಡ ಅವರ ಪ್ರತಿಕ್ರಿಯೆ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.