ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕಾಲಿನಿಂದ ತುಳಿದು ಕೊಂದಿದೆ. ಮೃತರನ್ನು 55 ವರ್ಷದ ಹಫೀಜ್ ಎಂದು ಗುರುತಿಸಲಾಗಿದೆ.
ಘಟನೆಯ ಬಳಿಕ ಹಫೀಜ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೇಲೂರು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ನಡುವೆ, ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿರುವುದನ್ನು ಖಂಡಿಸಿ ನೂರಾರು ಜನರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ
ಶನಿವಾರವಷ್ಟೇ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಒಂಟಿ ಸಲಗದ ದಾಳಿಗೆ ದನ ಮೇಯಿಸಲು ತೆರಳಿದ್ದ ಚೌಡನಹಳ್ಳಿಯ ಜಯಮ್ಮ ಮೃತಪಟ್ಟಿದ್ದರು. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹವಿಟ್ಟು ನಿನ್ನೆ ಮಧ್ಯಾಹ್ನದವರೆಗೂ ಪ್ರತಿಭಟನೆ ನಡೆಸಿ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದರು.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬೇಲೂರು ಭಾಗದಲ್ಲಿರುವ ಕಾಡಾನೆಗಳನ್ನು ಓಡಿಸುವುದಾಗಿ ಸಿಸಿಎಫ್ ಏಡುಕೊಂಡಲ ಭರವಸೆ ನೀಡಿದ್ದರು. ಅದರಂತೆ ಇಂದು ಬೇಲೂರು ಭಾಗಕ್ಕೆ ಕುಮ್ಕಿ ಆನೆಗಳು ಆಗಮಿಸಬೇಕಿತ್ತು. ನಾಳೆಯಿಂದ ಕಾರ್ಯಾಚರಣೆ ಆರಂಭಿಸಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಈ ಕ್ರಮಗಳು ಜಾರಿಗೆ ಬರುವ ಮುನ್ನವೇ ಮತ್ತೊಂದು ಕಾಡಾನೆ ದಾಳಿ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಬೇಲೂರು ತಾಲೂಕು ಆಸ್ಪತ್ರೆ ಎದುರು ಜನರ ಆಕ್ರೋಶ
ಹಫೀಜ್ ಅವರ ಮೃತದೇಹವಿದ್ದ ಆ್ಯಂಬುಲೆನ್ಸ್ ಬೇಲೂರು ತಾಲೂಕು ಆಸ್ಪತ್ರೆಗೆ ಪ್ರವೇಶಿಸದಂತೆ ಪ್ರತಿಭಟನಾಕಾರರು ಅಡ್ಡಗಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ತರಲಾಗಿದ್ದ ಮೃತದೇಹವನ್ನು ಮತ್ತೆ ಘಟನಾ ಸ್ಥಳಕ್ಕೆ ಕೊಂಡೊಯ್ಯುವಂತೆ ಪಟ್ಟು ಹಿಡಿದಿದ್ದಾರೆ.
ಸರ್ಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಕಾಡಾನೆ ದಾಳಿಗಳು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ಹೆಚ್ಚಾಗಿದೆ.