ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ಸೇರಿದಂತೆ ಹಲವು ಕಾರಣಗಳಿಂದ 2022ರಿಂದ ವಿಳಂಬವಾಗಿದ್ದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 1,101 ಜಿಲ್ಲಾ ಪಂಚಾಯಿತಿ ಹಾಗೂ 3,580 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ.
ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, 2027ರ ಜನವರಿಯಲ್ಲಿ ಮತಪತ್ರಗಳ ಮೂಲಕ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ರಾಜ್ಯ ಚುನಾವಣಾ ಆಯೋಗ ಅಧಿಕೃತ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, 1,101 ಜಿಲ್ಲಾ ಪಂಚಾಯಿತಿ ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಯಾವ ಮತದಾರರ ಪಟ್ಟಿಯನ್ನು ಚುನಾವಣೆಗೆ ಬಳಸಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ್ದಾಗಿದೆ. ಹಳೆಯ ಮತದಾರರ ಪಟ್ಟಿಯನ್ನು ಬಳಸುವ ಪ್ರಸ್ತಾವನೆಯನ್ನು ಸರ್ಕಾರ ಮುಂದಿಟ್ಟಿದೆ. ಆದರೆ, ಈ ಕುರಿತು ಅಂತಿಮ ನಿರ್ಧಾರವನ್ನು ಆಯೋಗವೇ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

2022ರಿಂದ ಚುನಾವಣೆ ವಿಳಂಬವಾಗಲು ಕಾರಣವೇನು?
ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿ 2022ರಲ್ಲೇ ಮುಕ್ತಾಯಗೊಂಡಿದ್ದರೂ, ಹಲವು ಕಾರಣಗಳಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆದಿರಲಿಲ್ಲ. ಹಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲಾಗಿತ್ತು. ಕೆಲವು ಗ್ರಾಮೀಣ ಪ್ರದೇಶಗಳು ಸಮೀಪದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಯಾಗಿದ್ದವು.
ಈ ಬದಲಾವಣೆಗಳಿಂದಾಗಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರುಹೊಂದಿಸುವುದು ಅನಿವಾರ್ಯವಾಗಿತ್ತು. ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ಚುನಾವಣೆ ವಿಳಂಬವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ
ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸುವ ಸರ್ಕಾರದ ಜವಾಬ್ದಾರಿ ಪೂರ್ಣಗೊಂಡಿದೆ. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದ್ದು, ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೂ ಶಿಫಾರಸು ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇನ್ನು ಚುನಾವಣೆಯ ದಿನಾಂಕ, ನೀತಿ ಸಂಹಿತೆ ಮತ್ತು ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ ಮೇಲಿದೆ. ಆಯೋಗವು ದಿನಾಂಕ ಪ್ರಕಟಿಸಿದ ಬಳಿಕ ಚುನಾವಣಾ ಪ್ರಕ್ರಿಯೆ ಮುಂದುವರಿಯಲಿದೆ.
ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಟಿಕೆಟ್‌ಗಾಗಿ ತಮ್ಮ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ. ಜನವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯೊಂದಿಗೆ ಗ್ರಾಮೀಣ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ.